Thursday, November 26, 2026

spot_img

ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕರಿಮಣಿ ಸರ ಕಳವು: ಐವರು ಆರೋಪಿಗಳ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕುಂದಾಪುರ: ಕೋಟೇಶ್ವರದ ಕೊಡಿ ಹಬ್ಬದ ಸಂದರ್ಭದಲ್ಲಿ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 7 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 6 ಲಕ್ಷ ರೂ. ಮೌಲ್ಯದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ ಕಾರು ಹಾಗೂ ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನ.24ರಂದು ಗೀತಾ ಅವರು ಪತಿಯೊಂದಿಗೆ ಔಷಧ ತರಲು ಕುಂದಾಪುರಕ್ಕೆ ತೆರಳುತ್ತಿದ್ದರು. ಕೋಟೇಶ್ವರದಲ್ಲಿ ಕೊಡಿ ಹಬ್ಬ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೋಟೇಶ್ವರ ಬೈಪಾಸ್‌ನಲ್ಲಿ ಬಸ್‌ನಿಂದ ಇಳಿದು ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕಿದ ಬಳಿಕ ಮಧ್ಯಾಹ್ನ 12.30ರ ಸುಮಾರಿಗೆ ದೇವಸ್ಥಾನದ ಪೌಳಿಯ ಹೊರಭಾಗದಲ್ಲಿ ಊಟದ ಸರತಿ ಸಾಲಿನಲ್ಲಿ ನಿಂತಿದ್ದರು.

ಈ ವೇಳೆ ಜನಜಂಗುಳಿಯ ನಡುವೆ ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಸುಮಾರು 7 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದರು. ಕಳವಾದ ಚಿನ್ನದ ಸರದ ಅಂದಾಜು ಮೌಲ್ಯ 6 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಕುಂದಾಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೊಡಗು ಜಿಲ್ಲೆಯ ಕುಶಾಲನಗರದ ಭಾಗ್ಯ (39), ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅಶ್ವಿನಿ ಅಲಿಯಾಸ್ ಗಾಯತ್ರಿ (25), ಕಾಮಾಚಿ (50), ಕೃಷ್ಣಗಿರಿ ಜಿಲ್ಲೆಯ ಆದಮ್ಮಾಳ್ ಅಲಿಯಾಸ್ ಆದ್ಯಾಮ್ಮ (49) ಹಾಗೂ ಕೊಡಗು ಜಿಲ್ಲೆಯ ಕುಶಾಲನಗರದ ಎಸ್. ನಾಗರಾಜ (48) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕಳವು ಮಾಡಲಾಗಿದ್ದ ಸುಮಾರು 7 ಪವನ್ ತೂಕದ ಚಿನ್ನದ ಕರಿಮಣಿ ಸರ (ಅಂದಾಜು ಮೌಲ್ಯ 6 ಲಕ್ಷ ರೂ.), ಕೃತ್ಯಕ್ಕೆ ಬಳಸಿದ್ದ ಬೆಳ್ಳಿ ಬಣ್ಣದ ಮಹೀಂದ್ರಾ ಟಿಯುವಿ 300 ಕಾರು (ಅಂದಾಜು ಮೌಲ್ಯ 3 ಲಕ್ಷ ರೂ.) ಹಾಗೂ ಏಳು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಐವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕ ಜಯರಾಮ್ ಡಿ. ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಠಾಣೆಯ ಪಿಎಸ್‌ಐಗಳಾದ ನಂಜಾನಾಯ್ಕ್ ಎನ್. ಹಾಗೂ ಪುಷ್ಪ ಮತ್ತು ಸಿಬ್ಬಂದಿಗಳಾದ ಮೋಹನ, ಸಂತೋಷಕುಮಾರ್, ಮಹಾಬಲ ಶೆಟ್ಟಿಗಾರ, ಚಂದ್ರಶೇಖರ ಅರೆಶಿರೂರು, ಘನಶ್ಯಾಮ್, ಸಂತೋಷ ದೇವಾಡಿಗ, ಗೌತಮ, ಲೋಹಿತ್, ನಾರಾಯಣ, ಪದ್ಮಾವತಿ, ರೇವತಿ, ಭಾಗೀರಥಿ, ಚಾಲಕರಾದ ಎಆರ್‌ಎಸ್‌ಐ ರಾಜು ಭೋವಿ, ಖಾಸಿಮ್ ಜಮಾದಾರ್ ಹಾಗೂ ಆರ್‌ಡಿಸಿ ವಿಭಾಗದ ದಿನೇಶ್ ಮತ್ತು ನಿತೀನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles