ಉಡುಪಿ: ಯುವಜನರನ್ನು ಉತ್ಪಾದಕ ಶಕ್ತಿಯನ್ನಾಗಿ ರೂಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಕೋಟ–ಪಡುಕರೆದಲ್ಲಿರುವ ಶ್ರೀ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 4ರಂದು ಆಯೋಜಿಸಲಾದ ಈ ಕಾರ್ಯಾಗಾರದಲ್ಲಿ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಯೋಜನೆಯ ಕುರಿತು ವಿವರವಾದ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಕುಮಾರಿ ಲತಾ ಮಾತನಾಡಿ, ಯುವನಿಧಿ ಯೋಜನೆಯ ಉದ್ದೇಶ, ನೋಂದಣಿ ಪ್ರಕ್ರಿಯೆ ಹಾಗೂ ಫಲಾನುಭವಿಗಳು ಹೊಂದಬೇಕಾದ ಅರ್ಹತೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಿರುದ್ಯೋಗಿಯಾಗಿರುವ ಅವಧಿಯಲ್ಲಿ ಯುವಕರಿಗೆ ಪ್ರೋತ್ಸಾಹ ಧನ ನೀಡುವುದರೊಂದಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯ ಮಾಡುವುದೇ ಈ ಯೋಜನೆಯ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಮಾತನಾಡಿ, ವಿದ್ಯಾರ್ಥಿಗಳು ಆಧುನಿಕ ಜಗತ್ತಿನ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉದ್ಯೋಗ ಪಡೆದು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾದ ಸುರೇಶ್ ಪೂಜಾರಿ, ರೇಖಾ ಸುವರ್ಣ ಹಾಗೂ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಪ್ರೊ. ಸುಬ್ರಹ್ಮಣ್ಯ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.



