ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಯಶ್ಪಾಲ್ ಎ. ಸುವರ್ಣ ಅವರು ರವಿವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಗಳು ಕ್ರೀಡಾಪಟುಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಬೇಕು. ಕ್ರೀಡಾಕೂಟಗಳು ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಕ್ರೀಡಾಪಟುಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಆರೋಗ್ಯಕರ ಜೀವನಶೈಲಿಗೂ ಕ್ರೀಡೆ ಸಹಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಪೂರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವುದು ಮುಖ್ಯ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು ಎಂದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕುಂದಾಪುರ ಹಾಗೂ ಕಾಪು ತಾಲೂಕು ಕ್ರೀಡಾಧಿಕಾರಿಗಳಾದ ಸತ್ಯನಾರಾಯಣ ಜಿ. ಮತ್ತು ರವೀಂದ್ರ ನಾಯ್ಕ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನಿರೂಪಿಸಿದರು.


