ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ “ಗೋವಿಂದ ಪೈ ಸಂಶೋಧನ ಸಂಪುಟ” ಪರಿಷ್ಕೃತ ದ್ವಿತೀಯ ಮುದ್ರಣ ಭಾಗ – ೨ ರ ಅನಾವರಣ ಕಾರ್ಯಕ್ರಮವು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಾ.23 ರಂದು ಬೆಳಗ್ಗೆ 10 ಗಂಟೆಗೆ ಎಮ್‌ಜಿಎಮ್ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಬಗ್ಗೆ ರಾ.ಗೋ.ಪೈ.ಸಂ.ಕೇಂದ್ರದ ಆಡಳಿತಾಧಿಕಾರಿ ಡಾ.ಬಿ ಜಗದೀಶ್ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು.
ಗ್ರಂಥವನ್ನು ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಹೆ ಕುಲಪತಿ ಲೆ.ಜ.ಡಾ.ಎಂ.ಡಿ ವೆಂಕಟೇಶ್, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಎಮ್‌ಜಿಎಮ್ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪೂರ್ಣಿಮಾ ಉಪಸ್ಥಿತರಿರಲಿದ್ದಾರೆ. ರಾ.ಗೋವಿಂದ.ಪೈ ಸಂ.ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷ ಡಾ.ಬಿ.ಎ ವಿವೇಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಟಿ.ವಿ ಮೋಹನದಾಸ್ ಪೈ ಅವರು ಪ್ರವರ್ತಿಸಿರುವ ವಿಮಲಾ ವಿ. ಪೈ ಪ್ರಾಯೋಜಿತ “ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ – 2024” ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ & ಸಂಶೋಧಕ ನಾಡೋಜ ಡಾ.ಹಂ.ಪ ನಾಗರಾಜಯ್ಯ ಅವರಿಗೆ ನೀಡಿ ಗೌರವಿಸಲಾಗುವುದು. ಮುಂಬಯಿ ವಿವಿಯ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ್ ಕುಮಾರ್ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೃತಿಯ ಸಂಪಾದಕರುಗಳಾದ ಪ್ರೊ.ಮುರಳೀಧರ ಉಪಾಧ್ಯ ಹಾಗೂ ಡಾ.ಪಾದೇಕಲ್ಲು ವಿಷ್ಣು ಭಟ್ಟ, ಆರ್‌ಆರ್‌ಸಿಯ ಸಹಸಂಶೋಧಕ ಡಾ. ಅರುಣ್ ಕುಮಾರ್ ಎಸ್.ಆರ್ ಉಪಸ್ಥಿತರಿದ್ದರು.