ಉಡುಪಿ : ಗ್ರಾಮೋತ್ಸವಗಳ ಮೂಲಕ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ನೇರವಾಗಿ ತಲುಪಿಸಲು ಸಾಧ್ಯವಾಗುತ್ತಿದ್ದು, ಇಂತಹ ಕಾರ್ಯಕ್ರಮಗಳನ್ನು ಕನಿಷ್ಠ ಎರಡು–ಮೂರು ವರ್ಷಗಳಿಗೊಮ್ಮೆ ಆಯೋಜಿಸಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಬೈಂದೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬೈಂದೂರು ಉತ್ಸವ–2026 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೋತ್ಸವಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಸ್ಪಷ್ಟ ಅರಿವು ಮೂಡುವುದರ ಜೊತೆಗೆ ಅದರ ಪ್ರಯೋಜನಗಳೂ ನೇರವಾಗಿ ದೊರೆಯುತ್ತವೆ ಎಂದರು. ಇತ್ತೀಚಿನ ದಿನಗಳಲ್ಲಿ ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಉತ್ಸವಗಳು ಗ್ರಾಮೀಣ ಕುಲಕಸುಬುಗಳು, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಹಕಾರಿ ಎಂದು ಹೇಳಿದರು.

ಮಹಿಳಾ ಸಬಲೀಕರಣವನ್ನು ಕೇಂದ್ರವಾಗಿಟ್ಟುಕೊಂಡು ಜಾರಿಗೆ ತಂದಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳು ರಾಜ್ಯದ ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ನೀಡುತ್ತಿವೆ ಎಂದು ಅವರು ಹೇಳಿದರು. ಕೊಲ್ಲೂರು ಮತ್ತು ಕುಕ್ಕೆ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿದ್ದು, ಶೀಘ್ರದಲ್ಲೇ ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಬೈಂದೂರು ಉತ್ಸವವು ರಾಜ್ಯದಲ್ಲೇ ವಿಭಿನ್ನ ಪರಿಕಲ್ಪನೆಯ ಕಾರ್ಯಕ್ರಮವಾಗಿದ್ದು, ಸರಕಾರದ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಐತಿಹಾಸಿಕ ಪ್ರಯತ್ನವಾಗಿದೆ ಎಂದರು. ಪರಿಸರ ಪ್ರವಾಸೋದ್ಯಮಕ್ಕೆ ಬೈಂದೂರಿನಲ್ಲಿ ಅಪಾರ ಅವಕಾಶಗಳಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿಯಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕೊಲ್ಲೂರು ದೇವಳದ ಅರ್ಚಕರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಣುತ್ ಗಾಣಿಗ ಮತ್ತು ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.


