ಉಡುಪಿ: ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಜನಸಾಮಾನ್ಯರ ಸಂಕಷ್ಟ ತಪ್ಪಿಸಿ, ಅವರಿರುವಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯದೊಂದಿಗೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತಿದೆ. ದುರ್ಬಲರು, ಹಿರಿಯ ನಾಗರಿಕರು, ಬಡವರು, ಕಾರ್ಮಿಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಭೆಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿಗೆ ತೆರಳಿ ಅವರ ಅಹವಾಲುಗಳನ್ನು ಆಲಿಸಿ ಸ್ಥಳೀಯ ಹಂತದಲ್ಲಿಯೇ ಪರಿಹಾರ ಕಲ್ಪಿಸಬೇಕು ಎಂದರು.

ಕರಾವಳಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಕಸ್ತೂರಿರಂಗನ್ ವರದಿಯ ಹೊಸ ಕರಡು ಅಧಿಸೂಚನೆಯಿಂದ ಉಂಟಾಗಿರುವ ಆತಂಕದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ರಿಜ್ವಾನ್ ಅರ್ಷದ್ ಹೇಳಿದರು. ಸಭೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ 21 ದಿನಗಳೊಳಗೆ ಪರಿಹಾರ ಒದಗಿಸಬೇಕು. ಸ್ಥಳೀಯ ಹಂತದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಅರ್ಜಿ ಸ್ವೀಕಾರದ ಜತೆಗೆ ವಿವಿಧ ಸರ್ಕಾರಿ ಸೌಲಭ್ಯಗಳ ಕುರಿತು ಸ್ಥಳದಲ್ಲೇ ಮಾಹಿತಿ ನೀಡಲಾಗುತ್ತಿದೆ ಎಂದರು. ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪ್ರತಿ ಬುಧವಾರ ಜಿಲ್ಲಾಧಿಕಾರಿ ಹಂತದಲ್ಲಿ ಅರ್ಜಿಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸಲಾಗುವುದು ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 75 ಅರ್ಜಿಗಳು ಸಲ್ಲಿಕೆಯಾದವು. ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಕೃಷಿ, ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳು ಮಳಿಗೆಗಳನ್ನು ತೆರೆದು ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದವು. ಇದೇ ವೇಳೆ ಕೃಷಿ ಮೇಳ–2026ರ ಪೋಸ್ಟರ್ ಬಿಡುಗಡೆ ಮಾಡಲಾಯಿತು. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಬ್ಯಾಟರಿ ಚಾಲಿತ ಗಾಲಿಕುರ್ಚಿ, ಹೊಲಿಗೆ ಯಂತ್ರ, ಮಾತನಾಡುವ ಲ್ಯಾಪ್‌ಟಾಪ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕ್ರಮ್ ಕಾಪು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


