Tuesday, March 24, 2026

spot_img

ಜಿಲ್ಲಾ ವರದಿ–2025, ಅಭಿವೃದ್ಧಿ ಯೋಜನೆ–2031: ದತ್ತಾಂಶಕ್ಕೆ ಡಿಸಿ ಸ್ವರೂಪ ಕರೆ..

ಉಡುಪಿ: ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ–2031 ರಚನೆ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಎಲ್ಲ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಿ ನಿಖರ ಹಾಗೂ ಸಮಗ್ರ ದತ್ತಾಂಶವನ್ನು ಕಾಲಮಿತಿಯೊಳಗೆ ಒದಗಿಸಬೇಕು ಎಂದು ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ಸಮಗ್ರ–ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆಗಳು ಭವಿಷ್ಯದ ಯೋಜನೆ ರೂಪಣೆಗೆ ದಿಕ್ಕು ತೋರಿಸುವ ಪ್ರಮುಖ ದಾಖಲೆಗಳಾಗಿವೆ. ಆದ್ದರಿಂದ ಎಲ್ಲಾ ಇಲಾಖೆಗಳು ತಯಾರಿಕಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಂಬಂಧಿತ ದಾಖಲೆಗಳು ಮತ್ತು ಮಾಹಿತಿಯನ್ನು ನಿಗದಿತ ಸಮಯದಲ್ಲಿ ಒದಗಿಸಬೇಕು. ಮಾನವ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಒತ್ತು ನೀಡುವಂತಹ ವರದಿ ಸಿದ್ಧವಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ–2031 ಅಡಿಯಲ್ಲಿ ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ, ಪರಿಸರ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಬೆಳವಣಿಗೆ ಸಾಧಿಸುವುದು ಪ್ರಮುಖ ಗುರಿಯಾಗಿದೆ. ದತ್ತಾಂಶ ಸಂಗ್ರಹ, ವಿಶ್ಲೇಷಣೆ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅತ್ಯಗತ್ಯ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಮತ್ತು ಸಮಗ್ರ–ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ–2031 ರಚನೆಗೆ ಎಲ್ಲ ಇಲಾಖೆಗಳು ಸಂಪೂರ್ಣ ಮಾಹಿತಿಯೊಂದಿಗೆ ಸಹಕರಿಸಬೇಕು. ಜೊತೆಗೆ ಫೀಡ್‌ಬ್ಯಾಕ್ ನೀಡುವುದೂ ಅಗತ್ಯವಾಗಿದೆ ಎಂದರು. ಮಾನವ ಅಭಿವೃದ್ಧಿ ವರದಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ, ಇದು ಮುಂದಿನ ಯೋಜನೆಗಳಿಗೆ ಪ್ರಮುಖ ಆಧಾರವಾಗಲಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಜಂಟಿ ನಿರ್ದೇಶಕ ಶ್ರೀನಿವಾಸ್ ರಾವ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿ ಜಿಲ್ಲೆಯ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾದ, ಸ್ಪಷ್ಟ ಮಾಹಿತಿಯನ್ನು ಒದಗಿಸಿದಲ್ಲಿ ಜಿಲ್ಲೆಯ ಸಮತೋಲನಯುತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಜೊತೆಗೆ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ವರದಿಯಲ್ಲಿ ಸೇರಿಸಿದರೆ ಅದಕ್ಕೆ ಹೆಚ್ಚಿನ ಮೌಲ್ಯ ದೊರೆಯಲಿದೆ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಯೋಜನೆ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles