Monday, March 2, 2026

spot_img

ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಮಂಡಳಿಯಿಂದ ಬೃಹತ್ ಕಾರ್ಯಾಗಾರ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ತೆಂಗು ಅಭಿವೃದ್ಧಿಗೆ ಸಂಬಂಧಿಸಿದ ಬೃಹತ್ ಕಾರ್ಯಾಗಾರವನ್ನು ಜನವರಿ 12ರಂದು ಆಯೋಜಿಸಲಾಗುತ್ತಿದೆ ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೆಂಗು ಅಭಿವೃದ್ಧಿಗೆ ಸಂಬಂಧಿಸಿದ ಈ ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸುವ ಉದ್ದೇಶವಿದ್ದು, ಮುಂದಿನ ಎರಡು ದಿನಗಳ ಒಳಗಾಗಿ ಸೂಕ್ತ ಸ್ಥಳವನ್ನು ಗುರುತಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜನವರಿ 12ರಂದು ನಡೆಯುವ ಕಾರ್ಯಾಗಾರದಲ್ಲಿ ರೈತರು ಅಳವಡಿಸಿಕೊಳ್ಳಬೇಕಾದ ಆಧುನಿಕ ಬೇಸಾಯ ಪದ್ಧತಿಗಳು, ಉತ್ಪನ್ನಗಳ ಮೌಲ್ಯವರ್ಧನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಈ ತಂತ್ರಜ್ಞಾನಗಳನ್ನು ಬಳಸಿಕೊಂಡು ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ತೆಂಗು ಬೆಳೆಗೆ ದೊರೆಯುವ ಸಹಾಯಧನಗಳ ಸದುಪಯೋಗ ಪಡೆದು ಮೌಲ್ಯವರ್ಧನೆಯ ಮೂಲಕ ಹೆಚ್ಚು ಲಾಭ ಗಳಿಸಿ ಯಶಸ್ವಿ ರೈತರಾಗಿ ಹೊರಹೊಮ್ಮಬೇಕೆಂದು ಹೇಳಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಕ್ಷಮಾ ಪಾಟೀಲ್, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ನಾಯಕ್, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಸತ್ಯನಾರಾಯಣ ಉಡುಪ, ಕೃಷಿ ವಿಜ್ಞಾನ ಕೇಂದ್ರದ ಧನಂಜಯ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles