ಉಡುಪಿ : ಜಿಲ್ಲಾ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಅದ್ಧೂರಿಯಾಗಿ ಮತ್ತು ಸುಸಂಘಟಿತವಾಗಿ ಆಚರಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಏಪ್ರಿಲ್ ೫ ರಂದು ಬೆಳಗ್ಗೆ ೧೦ ಗಂಟೆಗೆ ಡಾ. ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕೋರ್ಟ್ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ತಿಳಿಸಿದರು.

ಹಾಗೆಯೇ ಏಪ್ರಿಲ್ ೧೪ ರಂದು ಬೆಳಗ್ಗೆ ೧೦ ಗಂಟೆಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ಅಥವಾ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಸೂಚಿಸಿದ ಅವರು, ಆದಿ ಉಡುಪಿಯಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂಬೇಡ್ಕರ್ ಭವನದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವಮಾನ್ಯ ನಾಯಕರು ಆಗಿದ್ದು, ಒಂದೇ ಸಮುದಾಯಕ್ಕೆ ಸೀಮಿತ ವ್ಯಕ್ತಿ ಅಲ್ಲ. ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಅವರ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದವರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಸುಧಾಕರ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



