Thursday, October 23, 2025

spot_img

ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಉದ್ದಿಮೆ ಪರವಾನಿಗೆ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಹೊಂದಬೇಕು ಎಂಬ ನಿಯಮ ಜಾರಿಯಲ್ಲಿದ್ದು, ಪ್ರಸ್ತುತ ಪ್ರಗತಿಯು ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಪ್ರತ್ಯೇಕ ಪರವಾನಿಗೆ ಹೊಂದುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ದ್ವಿತೀಯ ತ್ರೈ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾ ವಹಿಸಬೇಕು. ಕೋಟ್ಪಾ ಕಾಯಿದೆಯ ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಸಮಿತಿಗೆ ಮಾಹಿತಿ ನೀಡಬೇಕು ಎಂದ ಅವರು ಸ್ಥಳೀಯ ಸಂಸ್ಥೆಗಳು ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ರಾಜ್ಯಮಟ್ಟದಲ್ಲಿ ಅಭಿವೃದ್ಧಿಪಡಿಸಲಾದ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗೆ ಸಂಬಂಧಿಸಿದ ವೆಬ್‌ಸೈಟ್ ಅನ್ನು ನೀಡಿದ್ದು, ಅದರಲ್ಲಿ ಪ್ರತೀ ಶಾಲಾ- ಕಾಲೇಜಿನವರು ತಂಬಾಕುಮುಕ್ತ ಶೈಕ್ಷಣಿಕ ಸಂಸ್ಥೆಯ ಮಾನದಂಡಗಳಿಗೆ ಬದ್ದವಾಗಿರುವುದರ ಕುರಿತು ಪರಿಶೀಲಿಸಿ, ನಮೂದಿಸಬೇಕು. ಇದು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪಿಯಲ್ಲಿ ಬರುವ ಜಿಲ್ಲೆಯ 1069 ಶಾಲೆಗಳಲ್ಲಿ 504 ಶಾಲೆಗಳನ್ನು ಮಾತ್ರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಒಂದು ವಾರದ ಒಳಗಾಗಿ ವೆಬ್‌ಸೈಟ್‌ನಲ್ಲಿ ಅಪ್ ಡೇಟ್ ಮಾಡಲು ಸೂಚಿಸಿದರು. ಜಿಲ್ಲೆಯಲ್ಲಿ ತಂಬಾಕು ಮುಕ್ತ ಹಳ್ಳಿ ಯೋಜನೆಯಡಿಯಲ್ಲಿ 5 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದೆ. 155 ಗ್ರಾಮ ಪಂಚಾಯತ್ ಕಚೇರಿಗಳು ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಾಗಬೇಕು ಎಂದ ಅವರು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಜೊತೆ ಸಮಾಲೋಚನೆ ನಡೆಸಿ ಅವರುಗಳ ಮನವೊಲಿಸಿ, ತಂಬಾಕು ಮುಕ್ತ ಹಳ್ಳಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಹೆಸ್ಕತ್ತೂರು ಹಾಗೂ ಕೊರ್ಗಿ ಗ್ರಾಮ ಪಂಚಾಯತ್‌ಗಳನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಇದರಿಂದ ಸದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರಿಗೆ ಆಗಿರುವ ಪ್ರಯೋಜನವನ್ನು ಇತರೆ ಗ್ರಾಮದವರಿಗೆ ತಿಳಿಯಪಡಿಸಿ ಅವರೂ ಕೂಡಾ ತಂಬಾಕು ಉತ್ಪನ್ನಗಳಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡಬೇಕು. ಜಿಲ್ಲೆಯಲ್ಲಿ 2025 ರ ಏಪ್ರಿಲ್ ಮಾಹೆಯಿಂದ ಈವರೆಗೆ 23 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ), 6(ಬಿ) ಅಡಿಯಲ್ಲಿ 324 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 52,900 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 60 ಪ್ರಕರಣಗಳಿಂದ 6750 ರೂ. ದಂಡ ವಸೂಲಿ ಮಾಡಲಾಗಿದೆ.

ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles