ಉಡುಪಿ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರು, ಬಾಣಂತಿಯರು ಹಾಗೂ ರೋಗಿಗಳ ಆರೋಗ್ಯ ಮತ್ತು ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿದ ಅವರು, ರೋಗಿಗಳಿಗೆ ಲಭ್ಯವಾಗುತ್ತಿರುವ ಆರೋಗ್ಯ ಸೇವೆಗಳ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯರ ಕುಶಲೋಪರಿ ವಿಚಾರಿಸಿದರು. ಆಸ್ಪತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.



ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನುರಾಧ ಬಿ. ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



