Saturday, November 28, 2026

spot_img

ತೆಕ್ಕಟ್ಟೆ ಗ್ರಾಮಸಭೆಯಲ್ಲಿ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೀವ್ರ ಆಕ್ಷೇಪ

ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿನ ಅವೈಜ್ಞಾನಿಕ ಯೋಜನೆ, ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಲೋಪ ಹಾಗೂ ಕಟ್ಟಡ ತೆರವಿನಲ್ಲಿನ ತಾರತಮ್ಯದ ವಿರುದ್ಧ ತೆಕ್ಕಟ್ಟೆ ಗ್ರಾಮಸ್ಥರು ಗ್ರಾಮಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಸಮರ್ಪಕ ಉತ್ತರ ನೀಡದೆ ಪ್ರೇಕ್ಷಕರಂತೆ ಉಳಿದಿರುವುದಕ್ಕೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ನ.26ರಂದು ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಆಡಳಿತಾಧಿಕಾರಿ ಹಾಗೂ ಸಿಡಿಪಿಒ ಉಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಸಮಸ್ಯೆಗಳು ಪ್ರಮುಖವಾಗಿ ಚರ್ಚೆಗೆ ಬಂದವು. ನ್ಯಾಯವಾದಿ ಬಿ. ಅವಿನಾಶ್ ಶೆಟ್ಟಿ ಬೇಳೂರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉದ್ದೇಶಕ್ಕಾಗಿ ಈ ಹಿಂದೆ ಭೂಸ್ವಾಧೀನ ಮಾಡಿಕೊಂಡು ಪರಿಹಾರ ಪಾವತಿಸಿರುವ ಜಾಗದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸದೆ ಕಾಮಗಾರಿ ಮುಂದುವರಿಸಲಾಗುತ್ತಿದೆ. ವಿದ್ಯುತ್ ಕಂಬಗಳನ್ನೂ ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ. ಈ ಲೋಪಗಳಿಗೆ ಸಂಬಂಧಪಟ್ಟ ಎಂಜಿನಿಯರ್ ಹಾಗೂ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಗ್ರಾಮಸ್ಥರು ಕಾನೂನು ಹೋರಾಟಕ್ಕೆ ಮುಂದಾದ ಬಳಿಕ ನ್ಯಾಯಾಲಯದ ನೋಟಿಸ್ ಹಿನ್ನೆಲೆಯಲ್ಲಿ ಅಧಿಕಾರಿಗಳು ಒತ್ತುವರಿ ಕಟ್ಟಡಗಳ ತೆರವಿಗೆ ಕ್ರಮ ಕೈಗೊಂಡಿದ್ದಾರೆ. ಆದರೆ, ಕೆಲವು ಕಟ್ಟಡಗಳನ್ನು ಭಾಗಶಃ ತೆರವುಗೊಳಿಸಿ, ಉಳಿದ ಕಟ್ಟಡಗಳ ತೆರವಿಗೆ ಕಾಲಾವಕಾಶ ನೀಡಲಾಗಿದೆ. ತೆಕ್ಕಟ್ಟೆಯ ಪ್ರಮುಖ ಪ್ರದೇಶದಲ್ಲಿರುವ ಕಟ್ಟಡವೊಂದನ್ನು ಇನ್ನೂ ತೆರವುಗೊಳಿಸದೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ ಕುಂದಾಪುರದ ಸಹಾಯಕ ಆಯುಕ್ತರೂ ಸ್ಥಳ ಪರಿಶೀಲನೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ಅಧಿಕಾರಿಗಳ ಕರ್ತವ್ಯಲೋಪದ ಕುರಿತು ಗ್ರಾಮಸ್ಥರ ಪರವಾಗಿ ಕೇಂದ್ರ ಜಾಗೃತ ದಳಕ್ಕೆ ಲಿಖಿತ ದೂರು ಸಲ್ಲಿಸಲಾಗಿದೆ. ತೆರವು ಕಾರ್ಯ ಪೂರ್ಣಗೊಳಿಸದೆ ಕಾಮಗಾರಿ ಮುಂದುವರಿಸಿದರೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಅಲೋಕ್, ಸಂಬಂಧಪಟ್ಟ ಯೋಜನಾ ವಿನ್ಯಾಸಕರನ್ನು ಸ್ಥಳಕ್ಕೆ ಕರೆಸಿ, ಗ್ರಾಮಸ್ಥರ ಬೇಡಿಕೆಗಳಿಗೆ ಅನುಗುಣವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಿರಿಯರಾದ ಲಕ್ಷ್ಮೀನಾರಾಯಣ ವೈದ್ಯ ಮಾತನಾಡಿ, ಪರಿಹಾರ ಪಾವತಿಸಿರುವ ಜಾಗದಲ್ಲಿ ಕಟ್ಟಡ ತೆರವುಗೊಳಿಸಿದ ಬಳಿಕ ಮತ್ತೆ ಅಕ್ರಮ ಕಟ್ಟಡಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಲಾಗಿದೆ. ಇಂತಹ ಕಟ್ಟಡಗಳಿಗೆ ಗ್ರಾಮ ಪಂಚಾಯತ್‌ನಿಂದ ವಿದ್ಯುತ್ ಎನ್‌ಒಸಿ ನೀಡಿರುವುದು ಕಾನೂನುಬಾಹಿರ. ಕಟ್ಟಡ ತೆರವು ಕಾರ್ಯಕ್ಕೆ ಪರೋಕ್ಷವಾಗಿ ಸಹಕಾರ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದ್ದು, ಇದರಿಂದ ತೆರವು ಪ್ರಕ್ರಿಯೆಗೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಮಾತನಾಡಿ, ಗ್ರಾಮಸ್ಥರ ಅಹವಾಲುಗಳಿಗೆ ಆದ್ಯತೆ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಮೊದಲು ಚರ್ಚಿಸಬೇಕು ಎಂದು ಒತ್ತಾಯಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮಾತನಾಡಿ, ಅವೈಜ್ಞಾನಿಕ ರಸ್ತೆ ಮತ್ತು ಒಳಚರಂಡಿ ಕಾಮಗಾರಿಯಿಂದ ಮಳೆಗಾಲದಲ್ಲಿ ಕೃಷಿಭೂಮಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಕಾಮಗಾರಿ ವೇಳೆ ಸುಮಾರು 16 ಲಕ್ಷ ರೂ. ಮೌಲ್ಯದ ಕುಡಿಯುವ ನೀರಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಆದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ ಎಂದು ತಿಳಿಸಿದರು. ಸಂಘಟಕ ಶ್ರೀನಾಥ ಶೆಟ್ಟಿ ಮೇಲ್ತಾರುಮನೆ ಮಾತನಾಡಿ, ತಾವು ವಿದ್ಯಾಭ್ಯಾಸ ಮಾಡಿದ ಕನ್ನಡ ಸರ್ಕಾರಿ ಶಾಲೆಯ ಕಟ್ಟಡ ಹಾಗೂ ಬ್ರಹ್ಮಸ್ಥಾನವೂ ಹೆದ್ದಾರಿ ಕಾಮಗಾರಿಯ ಪರಿಣಾಮ ಎದುರಿಸುತ್ತಿವೆ. ಕಾಮಗಾರಿಗೆ ಅಡ್ಡಿಯಾಗಿರುವ ಒತ್ತುವರಿ ಕಟ್ಟಡಗಳ ತೆರವಿಗೆ ವಿಳಂಬ ಮಾಡದೆ ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕುಂದಾಪುರ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿ, ಒತ್ತುವರಿ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕ ವೈಜ್ಞಾನಿಕ ರೀತಿಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗುವುದು ಎಂದರು. ಸಭೆಯಲ್ಲಿ ಮಾರ್ಗದರ್ಶಿ ಅಧಿಕಾರಿ ಹಾಗೂ ಕುಂದಾಪುರ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾ, ಕೊರಗ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ವಿ., ಉದ್ಯಮಿ ನಿತ್ಯಾನಂದ ಗಾಣಿಗ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು, ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಆಟೋ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ಸಂತೋಷ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ನೀಲು ಜಮಾ-ಖರ್ಚಿನ ವರದಿ ಮಂಡಿಸಿದರು. ಪಂಚಾಯತ್ ಸಿಬ್ಬಂದಿ ಭಾರತಿ ಶೆಟ್ಟಿ ಬೇಡಿಕೆಗಳ ಪಟ್ಟಿಯನ್ನು ವಾಚಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles