ಉಡುಪಿ: ಕಿನ್ನಿಮುಲ್ಕಿ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಲಭಾಗದಲ್ಲಿರುವ ಅಂಬಲಪಾಡಿ ಸರ್ವಿಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ ಸಂಗ್ರಹಗೊಂಡಿದ್ದು, ತೀವ್ರ ದುರ್ನಾತ ಹರಡುತ್ತಿದೆ. ಇದರಿಂದ ಸಾರ್ವಜನಿಕರು ಹಾಗೂ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಕೊಳೆತ ಕಸದಿಂದ ನೊಣ, ಸೊಳ್ಳೆ ಹಾಗೂ ಕ್ರಿಮಿಕೀಟಗಳ ಉತ್ಪತ್ತಿಯಾಗುತ್ತಿದ್ದು, ಡೆಂಗ್ಯೂ, ಮಲೇರಿಯಾ, ಅತಿಸಾರ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವಿದೆ. ಕಸದ ದುರ್ನಾತ ವಾಯುಮಾಲಿನ್ಯಕ್ಕೆ ಕಾರಣವಾಗುವುದರ ಜತೆಗೆ ಮಣ್ಣು ಮತ್ತು ಅಂತರ್ಜಲದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಎದುರಾಗುವ ಮುನ್ನ ಕ್ರಮ ಕೈಗೊಳ್ಳಬೇಕಿದೆ.

ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಕಸದ ರಾಶಿಯನ್ನು ತೆರವುಗೊಳಿಸಿ ಪರಿಸರವನ್ನು ಸ್ವಚ್ಛಗೊಳಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವುದರೊಂದಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ದೇವಸ್ಥಾನದ ಪರಿಸರದ ಪಾವಿತ್ರ್ಯ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.


