Tuesday, February 17, 2026

spot_img

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ, ದೋಷರಹಿತವಾಗಿ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ಜೊತೆಗೆ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–01 ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಅತಿ ಮಹತ್ವದ್ದಾಗಿರುವುದರಿಂದ ಜಿಲ್ಲೆಯಲ್ಲಿ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ನಿರ್ಭೀತ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ 17,181 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 16,657 ಹೊಸ ವಿದ್ಯಾರ್ಥಿಗಳು, 383 ಖಾಸಗಿ ಅಭ್ಯರ್ಥಿಗಳು, 135 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 6 ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ ಬರೆಯುವವರು ಸೇರಿದ್ದಾರೆ. ಪರೀಕ್ಷೆಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಿಗದಿತ ದಿನಾಂಕಗಳಲ್ಲಿ ನಡೆಯಲಿವೆ.

ವಿದ್ಯಾರ್ಥಿಗಳು ಪ್ರವೇಶ ಪತ್ರ ಕಡ್ಡಾಯವಾಗಿ ಹಾಜರುಪಡಿಸಬೇಕು. ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಸಂಪೂರ್ಣ ನಿಷೇಧ. ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ನಕಲಿ ಪ್ರಶ್ನೆಪತ್ರಿಕೆಗಳ ಮೂಲಕ ಸುಳ್ಳು ಸುದ್ದಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಎಚ್ಚರಿಸಿದರು.

ಪರೀಕ್ಷಾ ದಿನಗಳಲ್ಲಿ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಜೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚಲಾಗುವುದು. ಪ್ರಶ್ನೆಪತ್ರಿಕೆ ಸಾಗಾಟಕ್ಕೆ ಮೂರು ಸದಸ್ಯರ ಸಮಿತಿ ರಚಿಸಿ, ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ವಾಹನಗಳಿಗೆ ಜಿಪಿಎಸ್ ಅಳವಡಿಸಿ ಮೇಲ್ವಿಚಾರಣೆ ಮಾಡಲಾಗುತ್ತದೆ. ಪ್ರಶ್ನೆಪತ್ರಿಕೆಗಳ ಸಂಗ್ರಹ ಹಾಗೂ ವಿತರಣೆಯು 24×7 ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ, ವೆಬ್‌ಕಾಸ್ಟಿಂಗ್, ಸಮರ್ಪಕ ಆಸನ ವ್ಯವಸ್ಥೆ, ಬೆಳಕು, ಫ್ಯಾನ್, ಕುಡಿಯುವ ನೀರು ಹಾಗೂ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಬೇಕು. ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ.ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ತಾಲ್ಲೂಕು, ಜಿಲ್ಲಾ ಹಂತ ಹಾಗೂ ಪ್ರತಿಯೊಂದು ಕೇಂದ್ರಕ್ಕೆ ಜಾಗೃತದಳ ನಿಯೋಜಿಸಲಾಗಿದೆ.

ಸಭೆಗೆ ಮುನ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ರಾಜ್ಯಮಟ್ಟದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳಿಗೆ ಅಗತ್ಯ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತ ರಶ್ಮಿ, ಡಿಡಿಪಿಯು ಮಾರುತಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles