ಉಡುಪಿ : ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯ ಪಟ್ಟರು. ಅವರು ಇಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕೃತಿಕ ವೇದಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ “ಜನ ಜಲ್ಸಾ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರಲ್ಲಿ ಮಹಿಳೆಯರ ಪಾತ್ರ ಬಹಳ
ಪ್ರಮುಖವಾಗಿದೆ ಎಂದ ಅವರು, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ್ ಪ್ರಸಾದ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಉಟ್ಟು ಜನಪದ ಉತ್ಸವದಲ್ಲಿ ಪಾಲ್ಗೊಂಡರು. ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿ ಕೊಠಡಿಗಳಲ್ಲಿ ಜನಪದ ವಸ್ತುಗಳನ್ನು ಇಟ್ಟು ಅಲಂಕರಿಸಿದ್ದರು ಹಾಗೂ ಸಾಂಪ್ರದಾಯಿಕ ರುಚಿಕರ ತಿಂಡಿ ತಿನಸುಗಳನ್ನು ತಯಾರಿಸಿ ಮಾರಾಟವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಸಾಫಲ್ಯ ಟ್ರಸ್ಟ್ನ ನಿರ್ದೇಶಕಿ ನಿರುಪಮಾ ಪ್ರಸಾದ್, ಖ್ಯಾತ ಬರಹಗಾರ್ತಿ ವಸಂತಿ ಶೆಟ್ಟಿ ಬ್ರಹ್ಮಾವಾರ, ಕಾಲೇಜಿನ
ಐಕ್ಯೂಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್ ಗೌರಿ ಎಸ್ ಭಟ್ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಹಾಗೂ ಕಲಾ ನಿಕಾಯದ ಡೀನ್ ಪ್ರೊ. ನಿಕೇತನಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ ನಿರೂಪಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾ ಎಸ್.ಎನ್ ವಂದಿಸಿದರು.