ಉಡುಪಿ: ನಿಟ್ಟೂರು ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ದೀಪ ಬೆಳಗಿಸಿ ಕ್ರೀಡಾಕೂಟ ಉದ್ಘಾಟಿಸಿದರು.

ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಹಾಗೂ ಬೌದ್ಧಿಕ ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ಅತಿಥಿಯಾಗಿ ಭಾಗವಹಿಸಿದ್ದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಕರಿಕಲ್ಲುಮಠ ಅವರು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ರಾಮದಾಸ್ ನಾಯಕ್ ಸ್ವಾಗತಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸ್ನೇಹಾ ಕರ್ಕಾಡ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಅಶೋಕ್ ಎಂ. ಧನ್ಯವಾದ ಸಲ್ಲಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


