ಉಡುಪಿ : ನಿಟ್ಟೆ ಸಮೀಪದ ಬೋರ್ಗಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಸ್ಥಳೀಯ ನಿವಾಸಿಗಳು ಬೆಳಿಗ್ಗೆ ಎದ್ದಾಗ ವಾಸಸ್ಥಳಗಳಿರುವ ಕಾಲೋನಿಯೊಂದರ ಬಾವಿಯೊಳಗೆ ಚಿರತೆ ಪತ್ತೆಯಾಗಿದ್ದು, ಪೈಪ್ ಹಿಡಿದು ಘರ್ಜಿಸುತ್ತಿದ್ದ ದೃಶ್ಯ ಕಂಡು ಆತಂಕಗೊಂಡರು. ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಚಿರತೆ ಅನಾಯಾಸವಾಗಿ ಬಾವಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ತಕ್ಷಣವೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಚಂದ್ರಕಾಂತ್ ಕರುಣಾಕರ್, ಗಸ್ತು ಅರಣ್ಯಪಾಲಕ ಸುರೇಶ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿದರು.


ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಬಾವಿಗೆ ಬಿದ್ದಿದ್ದ ಚಿರತೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದರು. ಬಳಿಕ ಅದನ್ನು ಕಾಡಿಗೆ ಬಿಡಲಾಗಿದೆ. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದರಿಂದ ಜನರಲ್ಲಿ ಭೀತಿ ಉಂಟಾಗಿತ್ತು. ಈಗ ಚಿರತೆ ರಕ್ಷಣೆಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.



