ಉಡುಪಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಬಹೃತ್ ನೇತ್ರಾವತಿ ನದಿ ಈಗಾಗಲೇ ಕಲುಷಿತಗೊಳ್ಳಲು ಪ್ರಾರಂಭಗೊಂಡಿದೆ. ಈ ಬಗ್ಗೆ ಸಮಿತಿಯ ಮೇ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ, ನಿಯೋಗವು ಸದ್ಯದಲ್ಲಿಯೇ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆಯವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅವಳಿ ಜಿಲ್ಲೆಯ ನದಿಗಳ ರಕ್ಷಣೆ ಮಾಡಬೇಕೆಂಬ ಬೇಡಿಕೆಯನ್ನು ಸರಕಾರದ ಮುಂದೆ ಇಡಲಿದ್ದೇವೆ ಎಂದರು.
ನೇತ್ರಾವತಿ ನದಿ ಕಲುಷಿತವಾಗದಂತೆ ಮಾಡಲು ಸರಕಾರಕ್ಕೆ ಒತ್ತಡ ಹೇರಲು ಸದ್ಯದಲ್ಲೇ ಸಾಂಕೇತಿಕ ಪ್ರತಿಭಟನೆ ಮಾಡಲಿದೆ. ಅವಳಿ ಜಿಲ್ಲೆಗಳ ಸಮುದ್ರ ತೀರ ಸ್ವಚ್ಛತೆಯ ಬಗ್ಗೆ ವಿಶೇಷ ಗಮನಹರಿಸಲಿದ್ದೇವೆ ಎಂದರು. ಉಡುಪಿ ಜಿಲ್ಲೆಯಲ್ಲೇ ಕಾರ್ಯಾಚರಿಸುತ್ತಿರುವ ಅದಾನಿ ಕಂಪೆನಿಯ ಉಷ್ಣ ವಿದ್ಯುತ್ ಸ್ಥಾವರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24 x 7 ವಿದ್ಯುತ್ ಪೂರೈಕೆ ಮಾಡಬೇಕು ಎಂಬ ಸಮಿತಿಯ ಹೋರಾಟಕ್ಕೆ ರಾಜ್ಯ ಸರ್ಕಾರದಿಂದ ಸಕರಾತ್ಮಕ ಪ್ರತಿಕ್ರಿಯೆ ಲಭಿಸಿದೆ. ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ 2010ರಿಂದ ಕಾರ್ಯಾಚರಿಸುತ್ತಿರುವ ಈ ಉಷ್ಣ ವಿದ್ಯುತ್ ಸ್ಥಾವರವು ಪ್ರಸ್ತುತ 1300 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಇಲ್ಲಿಂದ ರಾಜಧಾನಿ ಬೆಂಗಳೂರಿಗೆ ಶೇ 45ರಷ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ತಮ್ಮ ವಿರೋಧ ಇಲ್ಲ, ಆದರೇ ಈ ಸ್ಥಾವರ ಅಸ್ತಿತ್ವದಲ್ಲಿರುವ ಅವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದಕ್ಕೆ ತಮ್ಮ ವಿರೋಧವಿದೆ. ಮೊದಲು ಈ ಅವಳಿ ಜಿಲ್ಲೆಗಳಿಗೆ ಮೊದಲು ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡಿ, ನಂತರ ಬೇರೆಡೆಗೆ ಕಳುಹಿಸಬೇಕು ಎಂಬುದು ಸಮಿತಿಯ ಪ್ರಮುಖ ಬೇಡಿಕೆಯಾಗಿತ್ತು.
ಈ ಬಗ್ಗೆ ಸ್ಪೀಕರ್ ಯು.ಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್, ಸರಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸದಾನಂದ ಗೌಡ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು, ಸ್ಪೀಕರ್ ಯುಟಿ ಖಾದರ್ ಇಂಧನ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್, ಉಪಾಧ್ಯಕ್ಷರಾದ ಕೆ.ಪಿ.ಜಗದೀಶ್ ಅಧಿಕಾರಿ, ಅರುಣ್ ಪ್ರಕಾಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡನ್ ಉಪಸ್ಥಿತರಿದ್ದರು.