ಉಡುಪಿ: ಬಡಜನರ ಜೀವನ ಮಟ್ಟ ಸುಧಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಪೂರ್ಣ ಪಂಚ ಗ್ಯಾರಂಟಿ ಯೋಜನೆಗಳನ್ನು ಪಂಚಾಯತ್‌ಗಳಿಗೆ ತೆರಳಿ ಅರ್ಹ ಪ್ರತಿಯೊಬ್ಬ ಫಲಾನುಭವಿಗೆ ಈ ಯೋಜನೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದರು.
ಅವರು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಪಂಚಾಯತಿನ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಹಾಗೂ ಯೋಜನೆಗಳ ಮಾಹಿತಿಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ “ನಮ್ಮ ನಡಿಗೆ ಪಂಚಾಯತ್ ಕಡೆಗೆ” ಎಂಬ ಕಾರ್ಯಕ್ರಮ ಆಯೋಜಿಸಿ, ಜನಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರಿಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲಾಗುತ್ತಿದೆ. ತಾಲೂಕು ಮಟ್ಟದಲ್ಲಿಯೂ ಸಹ ಇನ್ನಷ್ಟು ಪರಿಣಾಮಕಾರಿಯಾಗಿ ಬಡ ಜನರಿಗೆ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದ ಅವರು, ಜನಸಾಮಾನ್ಯರು ಯಾವುದೇ ಯೋಜನೆಗಳ ಲಾಭ ಪಡೆಯಲು ಮುಂದೆ ಬಂದಾಗ ಅವರುಗಳನ್ನು ಸತಾಯಿಸದೇ ಅವರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಲು ಕ್ರಮವಹಿಸಬೇಕು ಎಂದರು. ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳು ಅರ್ಜಿ ಸಲ್ಲಿಸುವಾಗ ಎದುರಾಗುವ ಸಣ್ಣ-ಪುಟ್ಟ ಸಮಸ್ಯೆಗಳನ್ನು ಸ್ಥಳಿಯ ಮಟ್ಟದಲ್ಲಿ ಬಗೆಹರಿಸಲು ಕ್ರಮವಹಿಸಬೇಕು. ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸಾಧ್ಯವಿಲ್ಲದ ಅರ್ಜಿಗಳ ಪಟ್ಟಿ ನೀಡಿದ್ದಲ್ಲಿ, ಅಂತಹ ಅರ್ಜಿಗಳನ್ನು ಜಿಲ್ಲಾ ಮಟ್ಟದ ಸಮಿತಿಯ ಮೂಲಕ ರಾಜ್ಯ ಸಮಿತಿಗೆ ಸಲ್ಲಿಸಲಾಗುವುದು ಎಂದ ಅವರು, ಗ್ಯಾರಂಟಿ ಯೋಜನೆಗಳ ಪ್ರಚಾರ ಇನ್ನಷ್ಟು ವ್ಯಾಪಕವಾಗಬೇಕು ಎಂದರು.ಈ ಹಿಂದೆ ಹೆರ್ಗಾ ಭಾಗದಲ್ಲಿ ಸಂಚರಿಸುತ್ತಿದ್ದ ಬಸ್ ಕಾರ್ಯಾಚರಣೆ ನಿಲ್ಲಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಸೋಮವಾರದಿಂದ ಬಸ್‌ಗಳು ಪುನಃ ಸಂಚಾರ ನಡೆಸುತ್ತಿವೆ. ಬಡಗುಬೆಟ್ಟು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಸಂಚಾರ ನಿಲ್ಲಿಸಿರುವ ಬಸ್‌ಗಳು ಪುನರ್ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದ ಅವರು, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ನಿಗಮದ ಬಸ್‌ಗಳ ಮಾಹಿತಿ ನೀಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿಯನ್ನು ಹೊಂದಿರುವ ಪಡಿತರ ಚೀಟಿದಾರರ ತನಿಖೆಯನ್ನು ಹಂತ ಹಂತವಾಗಿ ನಡೆಸಿ, ಅನರ್ಹ ಪಡಿತರ ಚೀಟಿ ರದ್ದುಪಡಿಸಲು ಕ್ರಮವಹಿಸಬೇಕು. ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಪಡಿತರ ಅಂಗಡಿಯಿಂದ ಅಕ್ಕಿಯನ್ನು ಪಡೆದು ಅದನ್ನು ಬಳಸದೇ ಇತರರಿಗೆ ಮಾರಾಟ ಮಾಡಿದ್ದಲ್ಲಿ ಪಡಿತರ ವಿತರಿಸಲಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಪಡಿತರ ಅಂಗಡಿಯವರು ನೀಡಬೇಕು ಎಂದ ಅವರು, ಸೊಸೈಟಿಯ ಸಿಬ್ಬಂದಿಗಳು ಸಹ ತಮ್ಮ ಗ್ರಾಹಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದರು.
ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಯುವನಿಧಿ ಯೋಜನೆಯ ಲಾಭ ಪಡೆಯುತ್ತಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಯೋಜನೆಯ ಪ್ರಗತಿ ಹೆಚ್ಚಿಸಬೇಕು. ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯಡಿ ಹೆಚ್ಚು ಹೆಚ್ಚು ನೋಂದಾಯಿಸಲು ಕಾಲೇಜುಗಳಲ್ಲಿ ಮಾಹಿತಿ ನೀಡುವಂತಹ ಕಾರ್ಯಾಗಾರಗಳನ್ನು ಏರ್ಪಡಿಸಬೇಕು ಎಂದ ಅವರು, ಡಿಪ್ಲೋಮಾ ಅಭ್ಯರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಉಡುಪಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು, ಉಡುಪಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ವಿಜಯಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.