Monday, August 25, 2025

spot_img

ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಣೆಗೆ ಸೂಚನೆ

ಉಡುಪಿ : ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ.

ಉಚ್ಚ ನ್ಯಾಯಾಲಯದ ಆದೇಶದಂತೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆ ಅನ್ವಯ ಸದರಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.

ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಈಗಾಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದ್ದು, ಪಿ.ಓ.ಪಿ ವಿಗ್ರಹಗಳನ್ನು ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ. ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ನೀರಿಗೆ ಎಸಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಪ್ರಕಟಣೆಯನ್ನು ನೀಡಲಾಗಿದ್ದು, ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles