Tuesday, February 17, 2026

spot_img

ಪಿ.ಎಂ. ಶ್ರಮಯೋಗಿ ಮಾನ್‌ಧನ್ ಯೋಜನೆ: ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಕೋಟ ಸೂಚನೆ

ಉಡುಪಿ : ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರನ್ನು ಯೋಜನೆಯಡಿ ನೋಂದಾಯಿಸುವ ಮೂಲಕ ಅದರ ಪ್ರಯೋಜನವನ್ನು ತಲುಪಿಸುವಲ್ಲಿ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಅವರು ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯ ಪ್ರಗತಿ ಪರಿಶೀಲನೆ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಇಲ್ಲದಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ವಂತಿಕೆ ಆಧಾರಿತ ಈ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಯ ಲಾಭವನ್ನು ಅರ್ಹ ಕಾರ್ಮಿಕರು ತಪ್ಪದೇ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಅಸಂಘಟಿತ ಕಾರ್ಮಿಕರಿಗಾಗಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದು ಮಾರ್ಚ್ 15ರವರೆಗೆ ನಡೆಯಲಿದೆ. 18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಮೊದಲ ತಿಂಗಳ ವಂತಿಕೆ ಸಲ್ಲಿಸಿ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಂಸದರು ತಿಳಿಸಿದರು. ಆದಾಯ ತೆರಿಗೆ ಪಾವತಿದಾರರು, ಸಂಘಟಿತ ವಲಯದ ಕಾರ್ಮಿಕರು ಹಾಗೂ ಇಎಸ್‌ಐ/ಪಿಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಾಗುವುದಿಲ್ಲ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಗೆ 7,275 ಕಾರ್ಮಿಕರನ್ನು ನೋಂದಾಯಿಸುವ ಗುರಿ ನಿಗದಿಪಡಿಸಲಾಗಿದ್ದು, ಇದುವರೆಗೆ 7,225 ಅಸಂಘಟಿತ ಕಾರ್ಮಿಕರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ಗುರಿಯನ್ನು ಸಾಧಿಸಲು ವಿಶೇಷ ನೋಂದಣಿ ಅಭಿಯಾನದಲ್ಲಿ ಇನ್ನಷ್ಟು ಚುರುಕು ತರಬೇಕಾಗಿದೆ. ವಿಶೇಷವಾಗಿ ಮನೆಕೆಲಸ ನಿರ್ವಹಿಸುವ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ, ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles