Monday, May 11, 2026

spot_img

ಪ್ರಧಾನ ಮಂತ್ರಿ ಬಿಮಾ ಯೋಜನೆಗಳ ಲಾಭ ಎಲ್ಲರಿಗೂ ತಲುಪಲಿ : ಡಾ. ವಿಶಾಲ್ ಆರ್

ಉಡುಪಿ : ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ಲಾಭ ಪ್ರತಿಯೊಬ್ಬರಿಗೂ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾಜಿಕ ಭದ್ರತೆ ಒದಗಿಸುವ ಈ ಯೋಜನೆಗಳು ಅಲ್ಪ ವೆಚ್ಚದಲ್ಲಿ ಕುಟುಂಬಗಳಿಗೆ ಆರ್ಥಿಕ ರಕ್ಷಣೆಯನ್ನು ನೀಡುತ್ತವೆ. ಜೀವನದ ಅನಿಶ್ಚಿತತೆಯ ವಿರುದ್ಧ ರಕ್ಷಣೆ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿದೆ” ಎಂದು ಹೇಳಿದರು.

ಅಲ್ಪ ಪ್ರಮಾಣದ ವಿಮಾ ಮೊತ್ತ ಪಾವತಿಸುವ ಮೂಲಕ ಅಪಘಾತ, ಅಂಗವೈಕಲ್ಯ ಹಾಗೂ ಮರಣದಂತಹ ಸಂದರ್ಭಗಳಲ್ಲಿ ಆರ್ಥಿಕ ಭದ್ರತೆ ದೊರೆಯಲಿದೆ. ಸರ್ಕಾರಿ ಹಾಗೂ ಖಾಸಗಿ ವಲಯದ ನೌಕರರು ಕಡ್ಡಾಯವಾಗಿ ಯೋಜನೆಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಅಪಘಾತದಲ್ಲಿ ಮರಣ ಸಂಭವಿಸಿದಲ್ಲಿ ಕುಟುಂಬಕ್ಕೆ 40 ಲಕ್ಷಕ್ಕಿಂತ ಹೆಚ್ಚಿನ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದೆ. ಹೊರಗುತ್ತಿಗೆ ನೌಕರರಿಗೂ ಯೋಜನೆಗಳ ವ್ಯಾಪ್ತಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಅಗ್ರಗಣ್ಯ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾಹನ ನಿಲುಗಡೆ ಸಮಸ್ಯೆ ನಿವಾರಣೆಗೆ ವರ್ಟಿಕಲ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಜಲ್ ಜೀವನ್ ಮಿಷನ್ ಹಾಗೂ ವಾರಾಹಿ ಯೋಜನೆಗಳ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಅವರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಬಾಕಿ ಉಳಿದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸೂಚಿಸಿದರು. ಆರೋಗ್ಯ ಸೇವೆಗಳ ಕುರಿತು ಮಾತನಾಡಿದ ಅವರು, ಕೊರಗ ಸಮುದಾಯ ಸೇರಿದಂತೆ ಹಿಂದುಳಿದ ವರ್ಗದ ಜನರಿಗೆ ಸರ್ಕಾರದ ಆರೋಗ್ಯ ಯೋಜನೆಗಳ ಸೌಲಭ್ಯ ತಲುಪುವಂತೆ ಆಶಾ ಹಾಗೂ ಆರೋಗ್ಯ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದರು.

ಕೊಚ್ಚಿನ್ ಶಿಪ್‌ಯಾರ್ಡ್ ಕಾರ್ಯವ್ಯಾಪ್ತಿ ವಿಸ್ತರಣೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಸಬೇಕು. ಇದಕ್ಕೆ ಪೂರಕವಾಗಿ ಐಟಿಐಗಳಲ್ಲಿ ವೃತ್ತಿಪರ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles