ಉಡುಪಿ: ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ನಿಯಂತ್ರಣ ಮತ್ತು ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಬೀಡಾಡಿ ಪ್ರಾಣಿಗಳಿಗಾಗಿ ಅಗತ್ಯವಿರುವ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಆಯೋಜಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ಮತ್ತು ರೈಲು ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಉಂಟಾಗಬಹುದಾದ ಅಪಾಯಗಳನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯವು ಮಾರ್ಗಸೂಚಿಗಳನ್ನು ನೀಡಿದೆ. ಅವುಗಳನ್ನು ಎಲ್ಲ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 4,405 ಬೀದಿ ನಾಯಿಗಳನ್ನು ಗುರುತಿಸಲಾಗಿದ್ದು, ಪ್ರತಿಯೊಂದು ಸಂಸ್ಥೆಯಲ್ಲೂ ಅವುಗಳ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೆಲವೆಡೆ ನೋಡಲ್ ಅಧಿಕಾರಿಗಳ ನೇಮಕವಾಗದಿದ್ದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಎ.ಬಿ.ಸಿ. (ಕ್ಯಾಪ್ಚರ್–ಸ್ಟೆರಿಲೈಸೇಶನ್–ವ್ಯಾಕ್ಸಿನೇಷನ್) ಕ್ರಮವನ್ನು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ನಿರಂತರವಾಗಿ ಜಾರಿಗೊಳಿಸಬೇಕು. ಅಗತ್ಯವಿದ್ದಲ್ಲಿ ಪೌರ ಕಾರ್ಮಿಕರಿಗೆ ತರಬೇತಿ ನೀಡುವ ಮೂಲಕ ನಾಯಿಗಳ ಹಿಡಿತ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಹೇಳಿದರು. ಆಶ್ರಯ ತಾಣಗಳ ನಿರ್ವಹಣೆಗೆ ದಾನಿಗಳು ಮುಂದೆ ಬಂದರೆ ದತ್ತು ಯೋಜನೆಯಡಿ ಅವರ ಸಹಕಾರ ಪಡೆಯುವಂತೆ ಸೂಚಿಸಿದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ. ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



