ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಮನ್ವಿ (17) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿಯಂತೆ, ಸಮನ್ವಿ ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಡಿ.26ರಂದು ಸಂಜೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಹೊಸಮನೆ ಮನೆಯಲ್ಲಿ ಇದ್ದ ವೇಳೆ, ಮುಂಬರುವ ಪರೀಕ್ಷೆಗಳ ಕುರಿತು ತಾಯಿ ಓದಲು ಹೇಳಿ ಬುದ್ದಿವಾದದ ಮಾತು ಆಡಿದ ಹಿನ್ನೆಲೆಯಲ್ಲಿ ಯುವತಿ ಮನನೊಂದಿದ್ದಾಳೆ ಎನ್ನಲಾಗಿದೆ. ಬಳಿಕ ಕೋಣೆಗೆ ತೆರಳಿದ ಆಕೆ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದು, ನಂತರ ಪತ್ತೆಯಾದಾಗ ತಕ್ಷಣ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಡಿ.27ರಂದು ರಾತ್ರಿ 7.43ಕ್ಕೆ ಮೃತಪಟ್ಟಿದ್ದಾರೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



