ಉಡುಪಿ : ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯೆಯನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳ ಹಿಂದೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮುಖ್ಯ ಉದ್ದೇಶ ಹೆಣ್ಣು ಭ್ರೂಣ ಹತ್ಯೆಯನ್ನು ಹೋಗಲಾಡಿಸುವುದು, ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅವರುಗಳಿಗೆ ಒದಗಿಸಿ, ಗೌರಯುತವಾಗಿ ಅವರು ಜೀವನ ನಡೆಸುವಂತೆ ಮಾಡುವುದರೊಂದಿಗೆ ಗಂಡು-ಹೆಣ್ಣು ಸಮತೋಲನ ಕಾಯ್ದುಕೊಳ್ಳುವುದಾಗಿರುತ್ತದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಜೀತ ಪದ್ಧತಿ ರದ್ಧತಿ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಇಂದಿಗೂ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಜಿಲ್ಲೆಯಲ್ಲಿ ಸದಸ್ಯ ಪರಿಸ್ಥಿತಿಯು ಆಶಾದಾಯಕವಾಗಿದೆ. ಹೆಣ್ಣು ಮಕ್ಕಳು ಹುಟ್ಟುವುದೇ ಬೇಡ, ಅವರು ಹೊರೆಯಾಗುತ್ತಾರೆ ಎಂದು ಭಾವಿಸದೇ ಗಂಡು ಮಕ್ಕಳಿಗೆ ಸರಿಸಮಾನವಾಗಿ ಹೆಣ್ಣು ಮಕ್ಕಳನ್ನು ಬೆಳೆಸಬೇಕು. ಹೆಣ್ಣು ಮಕ್ಕಳಿಗೆ ಅನುಕಂಪ ತೋರದೇ ಅವರುಗಳಿಗೆ ಎಲ್ಲಾ ಕ್ಷೇತ್ರಗಳಿಯೂ ಅವಕಾಶ ನೀಡುವುದರೊಂದಿಗೆ ಸಮಾನತೆ ಕಲ್ಪಿಸಬೇಕು. ಅದರಲ್ಲೂ ಗ್ರಾಮೀಣ ಹಾಗೂ ತಳ ಸಮುದಾಯದ ಹೆಣ್ಣು ಮಕ್ಕಳು ಸಮಾಜದ ಮುನ್ನೆಲೆಗೆ ಬರಬೇಕು. ಶಿಕ್ಷಣ ದೊರಕಿದ್ದಲ್ಲಿ ಸಮಾನ ಅವಕಾಶ ದೊರಕಲು ಸಾಧ್ಯ ಎಂದ ಅವರು, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿದೇಶಕಿ ನಿರ್ಮಲಾ ಕುಮಾರಿ, ನ್ಯಾಯವಾದಿ ಪ್ರದೀಪ್ ಪಿ.ಜೆ ಹಾಗೂ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಪೊಲೀಸ್ ನಿರೀಕ್ಷಕ ಡಾ.ಡಿ.ಟಿ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.