ಉಡುಪಿ : ಬೈಂದೂರು ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿರೂರು ಹಡವಿನಕೋಣೆ ನ್ಯೂ ಕಾಲೋನಿಯ ನಿವಾಸಿ ಕರಾ ಇಲಿಯಾಸ್ (49) ಮೃತಪಟ್ಟವರು.

ಮಲ್ಪೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಭಟ್ಕಳದತ್ತ ಮೀನು ತುಂಬಿಕೊಂಡು ಸಾಗುತ್ತಿದ್ದ ಬೊಲೆರೋ ಪಿಕಪ್ ವಾಹನವು, ಶಿರೂರು ಮಾರ್ಕೆಟ್ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ನಜ್ಜುನಜ್ಜಾಗಿ, ಚಾಲಕ ಇಲಿಯಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಪಿಕಪ್ ವಾಹನದ ಅತೀವ ವೇಗ ಮತ್ತು ಅಜಾಗರೂಕ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪಿಕಪ್ ವಾಹನ ಮತ್ತು ಚಾಲಕನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
