ಉಡುಪಿ : ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಆಚರಿಸಲ್ಪಡುವ ಡಾ.ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಏಪ್ರೀಲ್ 14 ರಂದು ಬೆಳಗ್ಗೆ 10 ಕ್ಕೆ ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಚರಿಸಲಾಗುವುದು. ಸಭಾ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬುದ್ಧ ವಂದನೆ ಕಾರ್ಯಕ್ರಮ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರತಿಭಾನ್ವಿತ ನಿಲಯಾರ್ಥಿಗಳನ್ನು, ನಗರಸಭೆಯ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು ಎಂದ ಅವರು, ಅಂತರ್ ಜಾತಿ ವಿವಾಹವಾದ ಮೂವರು ದಂಪತಿಗಳಿಗೆ ಪ್ರೋತ್ಸಾಹಧನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದರು. ಬಾಬು ಜಗಜೀವನರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆಯ ದಿನಗಳಂದು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ನಿಯೋಜಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಾಗ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲ ತಾಲೂಕು ಕಚೇರಿ, ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಇತರೆ ಕಚೇರಿಗಳಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದ ಅವರು, ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಶಾಲಾ, ಕಾಲೇಜು ಹಂತದಲ್ಲಿ ಭಾಷಣ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ಎರಡು ವರ್ಷಗಳಲ್ಲಿ ಲೋಕಸಭಾ, ವಿಧಾನ ಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ಮಹನೀಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಕಾರ್ಯಕ್ರಮವನ್ನು ಸಂಭ್ರಮದಿಂದ ಶಿಸ್ತುಬದ್ದವಾಗಿ ನಡೆಯಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.