ಉಡುಪಿ: ಮಂಗಳೂರು–ಮುಂಬೈ ನಡುವೆ ಸಂಚರಿಸುವ ಮತ್ಸ್ಯಗಂಧಾ ರೈಲು ಸೇರಿದಂತೆ ಕೊಂಕಣ ರೈಲ್ವೆ ಮಾರ್ಗದ ವಿವಿಧ ರೈಲುಗಳಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ವಿಶೇಷವಾಗಿ ರತ್ನಗಿರಿ ನಿಲ್ದಾಣದ ಸಮೀಪ ಪ್ರಯಾಣಿಕರನ್ನು ಗುರಿಯಾಗಿಸಿ ಹೆಚ್ಚಿನ ಪ್ರಮಾಣದಲ್ಲಿ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಪ್ರಯಾಣಿಕರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಕೇಂದ್ರ ರೈಲ್ವೆ ಮಂಡಳಿಯ ಸುರಕ್ಷತಾ ವಿಭಾಗದ ಮಹಾನಿರ್ದೇಶಕಿ ಸೋನಿಯಾ ಶರ್ಮಾ ಅವರನ್ನು ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದ ಸಂಸದರು, ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು.ರೈಲುಗಳಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈವರೆಗೆ ನಡೆದಿರುವ ಸಂಘಟಿತ ಕಳ್ಳತನ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ನಾಲ್ಕು ರಾಜ್ಯಗಳ ಸಹಕಾರದೊಂದಿಗೆ ವಿಶೇಷ ತನಿಖಾ ತಂಡವನ್ನು ರಚಿಸಿ, ಪ್ರಕರಣಗಳ ಹಿಂದಿರುವವರನ್ನು ಪತ್ತೆಹಚ್ಚಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಮನವಿಗೆ ಸ್ಪಂದಿಸಿದ ಸೋನಿಯಾ ಶರ್ಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ, ಅಪರಾಧ ಪ್ರಕರಣಗಳ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮುಂದಿನ ವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರನ್ನು ಭೇಟಿಯಾಗಿ ರೈಲು ಪ್ರಯಾಣಿಕರ ಸುರಕ್ಷತೆಗೆ ಅಗತ್ಯವಾದ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


