ಉಡುಪಿ: ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಬಂದು ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು) ತೀವ್ರವಾಗಿ ಖಂಡಿಸಿದೆ.

ಇತ್ತೀಚಿನ ದಿನಗಳಲ್ಲಿ ಮಲ್ಪೆ ಬಂದರುದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿರುವ ಬಡ ಕಾರ್ಮಿಕರ ಮೇಲೆ ಹಲ್ಲೆ, ದಬ್ಬಾಳಿಕೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಂಘ ಆತಂಕ ವ್ಯಕ್ತಪಡಿಸಿದೆ. ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಶೇಖ್ ಅಯ್ಯುಬ್ ಮೇಲೆ ಹಲ್ಲೆ ನಡೆಸಿದ ಆರೋಪಿಯಾಗಿರುವ ಮಿಥುನ್ ಕರ್ಕೇರನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್ ಒತ್ತಾಯಿಸಿದ್ದಾರೆ. ಕಾರ್ಮಿಕರ ಸುರಕ್ಷತೆ ಮತ್ತು ನ್ಯಾಯಕ್ಕಾಗಿ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಂಘ ಮನವಿ ಮಾಡಿದೆ.



