ಉಡುಪಿ : ಮಲ್ಪೆ ಪ್ರದೇಶದಲ್ಲಿ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಹೊಸ ಆದೇಶದಿಂದ ಸ್ಥಳೀಯ ನೈಜ ಮೀನುಗಾರರಲ್ಲಿ ಆತಂಕ ಮತ್ತು ಅಸಮಾಧಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾವರಿಷ್ಠಾಧಿಕಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಮನವಿ ಸಲ್ಲಿಸಿದೆ.

ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ, ಉಡುಪಿ ಶಾಸಕ ಯಶಪಾಲ್ ಸುವರ್ಣರವರ ಅಧ್ಯಕ್ಷತೆಯ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನ್‌ಗೆ ದಶಕಗಳಿಂದ ಸ್ಥಳೀಯರು ಉಪಯೋಗಿಸುತ್ತಿರುವ ಸರಕಾರಿ ಜಾಗವನ್ನು ಮಂಜೂರು ಮಾಡಲಾಗಿದೆ. ಇದರಿಂದ ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಭಯ, ಗೊಂದಲ ಹಾಗೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ವಿಚಾರ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಅನಗತ್ಯ ಉದ್ವಿಗ್ನತೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಭವಿಷ್ಯದಲ್ಲಿ ಕಾನೂನು-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಸಮಿತಿ ಎಚ್ಚರಿಸಿದೆ.

ಸ್ಥಳೀಯ ಮೀನುಗಾರರ ಹಕ್ಕು ಮತ್ತು ಹಿತ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರ ಹೊರಡಿಸಿದ ಆದೇಶವನ್ನು ತಕ್ಷಣ ರದ್ದುಪಡಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವಿನಂತಿಸಿದೆ. ಹಾಗೆಯೇ ಗಲಭೆಗೆ ಕಾರಣವಾಗುವ ಯಾವುದೇ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಸ್ಥಳೀಯ ಮೀನುಗಾರರ ಜೀವನೋಪಾಯಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಈ ಸಂದರ್ಭ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ಹೇಳಿದರು.

ಮನವಿಯ ಪ್ರತಿಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ತಿಳಿಸಿದರು. ಮನವಿ ಸಲ್ಲಿಕೆಯ ವೇಳೆ ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮೀನುಗಾರ ಮುಖಂಡರು, ಕಾಪು ಬ್ಲಾಕ್ ಮೀನುಗಾರ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



