ಉಡುಪಿ : ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ಕಲ್ಪಿಸಬೇಕಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಮತ್ತು ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗಾಗಿ ಆಯೋಜಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ–2013 ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಭಯಮುಕ್ತ ವಾತಾವರಣ ಸಿಗಬೇಕು. ಮಹಿಳೆಯರು ಒತ್ತಡರಹಿತವಾಗಿ ಕೆಲಸ ನಿರ್ವಹಿಸಿದಾಗ ಕುಟುಂಬ ಮತ್ತು ಉದ್ಯೋಗ ಎರಡನ್ನೂ ಸಮತೋಲನದಿಂದ ನಿರ್ವಹಿಸಲು ಸಾಧ್ಯವಾಗುತ್ತದೆ. ಪೋಶ್ ಕಾಯ್ದೆ ಕೇವಲ ಕಡತಗಳಲ್ಲಿ ಉಳಿಯಬಾರದು. ಅದು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಉಡುಪಿ ಜಿಲ್ಲೆ ಶಿಕ್ಷಣ ಮತ್ತು ಸಾಮಾಜಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಅವಕಾಶವೇ ಇರಬಾರದು ಎಂದು ಅವರು ಅಭಿಪ್ರಾಯಪಟ್ಟರು.

ಯಾವುದೇ ಮಹಿಳೆ ಕೆಲಸದ ಸ್ಥಳದಲ್ಲಿ ಕಿರುಕುಳಕ್ಕೆ ಒಳಗಾದರೆ ದೂರು ನೀಡಲು ಹಿಂಜರಿಯಬಾರದು. ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಪ್ರತಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಬೇಕು. ಮಹಿಳೆಯರ ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಲು ಶೀ ಬಾಕ್ಸ್ ಪೋರ್ಟಲ್ ಪರಿಣಾಮಕಾರಿಯಾಗಿ ಬಳಸುವಂತೆ ಸೂಚಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಯಿಷಾ ಸಿಂಗ್ ಅವರು ಸ್ಥಳೀಯ ದೂರು ಸಮಿತಿ, ಆಂತರಿಕ ದೂರು ಸಮಿತಿ ರಚನೆ, ಕಾರ್ಯವೈಖರಿ ಹಾಗೂ ಶೀ ಬಾಕ್ಸ್ ಪೋರ್ಟಲ್ ಬಳಕೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನುರಾಧ ಬಿ. ಹಾದಿಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಸಂಗೀತ ಎಂ.ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



