Friday, November 6, 2026

spot_img

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ: ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ, ಬಳಕೆ ಹಾಗೂ ಸಾಗಾಟದಂತಹ ಚಟುವಟಿಕೆಗಳು ಕಂಡುಬಂದಲ್ಲಿ, ಸಾರ್ವಜನಿಕರು ಮಾಹಿತಿ ಹಂಚಿಕೊಳ್ಳಲು ಅಭಿವೃದ್ಧಿಪಡಿಸಿರುವ ಕ್ಯೂಆರ್ ಕೋಡ್ ಮೂಲಕ ಗೌಪ್ಯವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನವೆಂಬರ್ 6ರಂದು ನಡೆದ ಎನ್‌ಸಿಒಆರ್‌ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಆರ್ಥಿಕ ನಷ್ಟವೂ ಸಂಭವಿಸುತ್ತದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇದು ಅಡ್ಡಿಯಾಗುತ್ತದೆ. ಯುವಜನರು ಇಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಳುಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮಾಜದಲ್ಲಿ ಮಾದಕ ವ್ಯಸನಕ್ಕೆ ಕಡಿವಾಣ ಹಾಕಲು ಎಲ್ಲರೂ ಮುಂದಾಗಬೇಕು ಎಂದರು.

ಮಾದಕ ದ್ರವ್ಯಗಳ ಬಳಕೆ ಮತ್ತು ಮಾರಾಟದ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡಲು ಪೊಲೀಸ್ ಇಲಾಖೆ ಕ್ಯೂಆರ್ ಕೋಡ್ ಅಭಿವೃದ್ಧಿಪಡಿಸಿದೆ. ಮಾದಕ ವಸ್ತುಗಳ ಮಾರಾಟ, ಸಾಗಾಟ ಅಥವಾ ಸೇವನೆ ಕಂಡುಬಂದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಹಂಚಿಕೊಳ್ಳಬಹುದು. ಮಾಹಿತಿ ನೀಡಿದವರ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಔಷಧಿ ಅಂಗಡಿಗಳಲ್ಲಿ ಅಮಲು ಉಂಟುಮಾಡುವ ಔಷಧಿಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಬಾರದು. “ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ” ಎಂಬ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಔಷಧಿ ಅಂಗಡಿಗಳ ಸಿಸಿಟಿವಿ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ದೃಶ್ಯಾವಳಿಗಳನ್ನು ಕನಿಷ್ಠ ಮೂರು ತಿಂಗಳ ಕಾಲ ಸಂಗ್ರಹಿಸಬೇಕು. ಈ ಬಗ್ಗೆ ಔಷಧ ನಿಯಂತ್ರಕರು ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಲೆ-ಕಾಲೇಜುಗಳ ವಸತಿ ನಿಲಯಗಳಲ್ಲಿ ರಕ್ತ ತಪಾಸಣೆ ನಡೆಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಆಪ್ತ ಸಮಾಲೋಚನೆ ನೀಡಬೇಕು. ಔಷಧ ಅಂಗಡಿಗಳಲ್ಲಿ ಅನುಮಾನಾಸ್ಪದವಾಗಿ ಕೆಮ್ಮಿನ ಔಷಧ ಖರೀದಿಸುವವರ ಬಗ್ಗೆ ನಿಗಾ ವಹಿಸಬೇಕು ಎಂದರು. ಮಾದಕ ದ್ರವ್ಯಗಳ ಸೇವನೆ ಮತ್ತು ಮಾರಾಟದಿಂದ ಉಂಟಾಗುವ ಹಾನಿಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೀದಿ ನಾಟಕ, ಸಂಗೀತ, ಕಲೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸುವುದರ ಜೊತೆಗೆ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಕೃಷಿ ಜಮೀನು, ತೋಟಗಳು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಗಾಂಜಾ ಬೆಳೆ ಬೆಳೆಯಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ರೈಲು ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಸಾಗಾಟದ ಬಗ್ಗೆ ಎಚ್ಚರಿಕೆ ವಹಿಸುವುದರ ಜೊತೆಗೆ ಕ್ಯೂಆರ್ ಕೋಡ್ ಕುರಿತು ಪ್ರಚಾರ ಮಾಡಬೇಕು ಎಂದರು. ಮಾಹೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಪ್ರತಿಯೊಂದರಲ್ಲೂ ಮಾದಕ ವಸ್ತುಗಳ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಎದ್ದುಕಾಣುವ ಸ್ಥಳಗಳಲ್ಲಿ ಪ್ರದರ್ಶಿಸಬೇಕು ಎಂದು ಸೂಚಿಸಿದರು.

ಶಾಲಾ-ಕಾಲೇಜುಗಳು, ಬಸ್ ನಿಲ್ದಾಣಗಳು, ಸರ್ಕಾರಿ ಕಚೇರಿಗಳು, ಸಭಾಂಗಣಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು, ಔಷಧ ಅಂಗಡಿಗಳು ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸಬೇಕು. ಹಿಂದಿನ ಸಭೆಯಲ್ಲಿಯೂ ಈ ಕುರಿತು ಸೂಚನೆ ನೀಡಿದ್ದರೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles