ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಈ ವರ್ಷದ ಮೊದಲ ಲೋಕ ಅದಾಲತ್ ಮಾ.8 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಬಗ್ಗೆ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಈ ವರ್ಷದ ಲೋಕ ಅದಲಾತ್ನಲ್ಲಿ 3,442 ಸಿವಿಲ್ ಪ್ರಕರಣಗಳಿದ್ದು, ಅದರಲ್ಲಿ 1200 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. ವ್ಯಾಜ್ಯಪೂರ್ವ 3,300 ಪ್ರಕರಣಗಳಿಗೆ ಎಂದರು. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯಗಳ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ), ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಿಕೊಳ್ಳಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು, ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೆಶ್ ಉಪಸ್ಥಿತರಿದ್ದರು.