ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸೆ. 27ರಂದು ಯಕ್ಷಗಾನ ಕಲಾರಂಗದ 22ನೇ ವರ್ಷದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭ ನಡೆಯಿತು. ಪರ್ಯಾಯ ಶ್ರೀಶಿರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾಧನ, ಅನ್ನದಾನ, ಅಭಯದಾನ ಹಾಗೂ ಔಷಧದಾನದಂತಹ ಸಮಾಜಮುಖಿ ಸೇವೆಗಳನ್ನು ಯಕ್ಷಗಾನ ಕಲಾರಂಗ ಸಮರ್ಥವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಅನುಗ್ರಹ ಸಂದೇಶ ನೀಡಿದ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಯಾರಿಗೆ ಯಾವ ಸಂದರ್ಭದಲ್ಲಿ ಏನು ಅಗತ್ಯವಿದೆ ಎಂಬುದನ್ನು ಗುರುತಿಸಿ ನೆರವು ನೀಡುವ ಮೂಲಕ ಯಕ್ಷಗಾನ ಕಲಾರಂಗ ಸಮಾಜಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಸೇವೆ ಸಲ್ಲಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ್ ಮಾತನಾಡಿ, ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಮಣಿಪಾಲ ಆರೋಗ್ಯ ಕಾರ್ಡ್‌ಗಳನ್ನು ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿತರಿಸಿದರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಯಕ್ಷಗಾನ ಕಲಾರಂಗದ ಶೈಕ್ಷಣಿಕ ಹಾಗೂ ಸಮಾಜಪರ ಕಾರ್ಯಕ್ರಮಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಶಿವಮೊಗ್ಗದ ಮಾಜಿ ಮೇಯರ್ ಹಾಗೂ 3182ನೇ ಜಿಲ್ಲಾ ಗವರ್ನರ್ ಡಾ. ಪಿ. ನಾರಾಯಣ, ಉಡುಪಿ ಆದರ್ಶ ಆಸ್ಪತ್ರೆಯ ಡಾ. ಜಿ.ಎಸ್. ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್ಯ, ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್. ಭಟ್, ಯುಜಿಸಿಯ ಶಿಕ್ಷಣ ತಜ್ಞ ಡಾ. ಸುದರ್ಶನ ಮೂರ್ತಿ, ಹುಬ್ಬಳ್ಳಿಯ ಮೈಲೈಫ್ ಸಂಸ್ಥಾಪಕ ಪ್ರವೀಣ್ ವಿ. ಗುಡಿ ಮತ್ತಿತರರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಚೆನ್ನೈನ ಕೆ. ಅಣ್ಣಾಮಲೈ ಅವರು ಪ್ರತಿವರ್ಷ ನೀಡುತ್ತಿರುವ 25,000 ನೆರವನ್ನು ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು.

ಯು. ಉಪೇಂದ್ರ ಅವರ ಸ್ಮರಣೆಯಲ್ಲಿ ಉತ್ತಮ ಕ್ರೀಡಾ ನಿರ್ವಹಣೆಗೆ ನೀಡಲಾಗುವ ಹಾಗೂ ಅಕ್ಷತಾ ದೇವಾಡಿಗ ಅವರ ಸ್ಮರಣಾರ್ಥ ಉತ್ತಮ ಪತ್ರ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ. ಭಟ್ ಶ್ರೀಗಳಿಗೆ ಫಲ ಸಮರ್ಪಿಸಿದರು. ವಿ.ಜಿ. ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ವಂದಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ಸಹಕರಿಸಿದರು. ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.


