ಉಡುಪಿ : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದೀಪ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬಂದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ವಾಹನಗಳನ್ನು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸಾರಿಗೆ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ಸಂಚರಿಸುವುದರೊಂದಿಗೆ ಯಾವುದೇ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೀಡಿಯನ್ ಓಪನ್‌ಗಳನ್ನು ಮಾಡುವಾಗ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ, ನಿಯಮಾನುಸಾರ ವಾಹನ ದಟ್ಟಣೆ ಆಗದೇ ಇರುವಂತಹ ಸ್ಥಳಗಳನ್ನು ಗುರುತಿಸಿ, ಮಾಡಬೇಕೆಂದ ಅವರು, ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ್ ನಾಯಕ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ನಗರ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಿವಿಧ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದರಿಂದ, ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವ ಹಿನ್ನೆಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ, ನಿಯಮಾನುಸಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಿ.
ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)


