ಉಡುಪಿ: ೧೧ ವರ್ಷದ ಹಿಂದೆ ನಡೆದ ಅಪಘಾತಕ್ಕೆ ಸಂಬಂಧಿಸಿ ವಾರೆಂಟ್ ವಿಚಾರದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಆರೋಪ, ಪ್ರತಿಭಟನೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಹಾಗೂ ಪ್ರತಿವಾದವಾಗಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮೂವರು ಪೊಲೀಸರನ್ನು ತಾತ್ಕಾಲಿಕವಾಗಿ ರಜೆಯ ಮೇಲೆ ಕಳುಹಿಸಲಾಗಿದ್ದು, ಈ ವಿಚಾರವನ್ನು ಸಿಐಡಿ ತನಿಖೆಗೆ ಒಪ್ಪಿಸುವ ಕುರಿತು ಪ್ರಸ್ತಾವನೆ ಡಿಜಿ ಕಚೇರಿಯಲ್ಲಿದೆ. ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆ ನಡೆಯುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದರು.

ಇನ್ನು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಪೊಲೀಸ್ ಠಾಣೆ ಮುಂಭಾಗದಲ್ಲಿ ಅನುಮತಿಯಿಲ್ಲದೆ ಧ್ವನಿವರ್ಧಕ ಬಳಸಿದ ಹಿನ್ನೆಲೆಯಲ್ಲಿ ಗರಿಷ್ಠ 200 ರೂ. ದಂಡ ವಿಧಿಸಬಹುದಾದ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆ ನಡೆಸುವ ಮೊದಲು ಪೊಲೀಸರು ಆಯೋಜಕರಿಗೆ ನೋಟಿಸ್ ನೀಡಿದ್ದರೂ ಅಗತ್ಯ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಕಾರಣ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.



