ಉಡುಪಿ : ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫ್ರೆನ್ಸ್ ಕೊಠಡಿಯಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಪುರಭವನದಲ್ಲಿ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುವುದು. ಸಭಾ ಕಾರ್ಯಕ್ರಮಕ್ಕೂ ಮುನ್ನ ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಸೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಲತಾ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳ ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



