ಉಡುಪಿ : ಪ್ರತಿಭೆಗೆ ಯಾವುದೇ ಜಾತಿ–ವರ್ಗದ ಮಿತಿ ಇಲ್ಲ. ಕಡು ಬಡತನದಲ್ಲೂ ಅಪಾರ ಪ್ರತಿಭೆ ಅಡಗಿರುತ್ತದೆ. ಇಂತಹ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಸರ್ಕಾರ, ಇಲಾಖೆ ಹಾಗೂ ಸಮಾಜದ ಸಮನ್ವಿತ ಪ್ರೋತ್ಸಾಹ ಅತ್ಯಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ಎನ್.ಬಿ. ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಅವರು ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಆಯೋಜಿಸಿದ್ದ ಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು..

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಲಾಗುರುಗಳಾದ ರಮೇಶ್ ಕಲ್ಮಾಡಿ ಹಾಗೂ ಗಣೇಶ್ ಬಾರ್ಕೂರು ಅವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ತಮ್ಮ ಅನುಭವ ಮತ್ತು ಅನಿಸಿಕೆಗಳನ್ನು ಹಂಚಿಕೊಂಡರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉಡುಪಿ ಜಿಲ್ಲಾ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ದಿನ್ನಿ, ಕೊರಗ ಸಮಾಜದ ಮುಖಂಡ ಗಣೇಶ್ ಕೊರಗ ಉಪಸ್ಥಿತರಿದ್ದರು. ಉಪನ್ಯಾಸಕ ರಾಮಾಂಜಿ ನಮ್ಮಭೂಮಿ ಕಾರ್ಯಕ್ರಮ ನಿರೂಪಿಸಿದರೆ, ಬನ್ನಂಜೆ ವಸತಿಶಾಲೆಯ ಮೇಲ್ವಿಚಾರಕಿ ಸುಚಿತ್ರಾ ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಕಲಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಉತ್ತರ ಕನ್ನಡದ ಹಾಲಕ್ಕಿ ಕುಣಿತ, ಕೋಲಾಟ, ಕೊರಗ ಸಮುದಾಯದ ಡೊಳ್ಳು ಕುಣಿತ ಹಾಗೂ ಕಂಗೀಲು ನೃತ್ಯ ಪ್ರದರ್ಶನಗಳು ನಡೆಯಿ, ಸಭಿಕರ ಮನಸೂರೆಗೊಂಡವು.



