ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಯಾಗುತ್ತಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಮಧ್ಯಭಾಗದಲ್ಲಿರುವ ಈ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತಿನಲ್ಲಿ ಕುಡುಕರ ಹಾಗೂ ತೃತೀಯ ಲಿಂಗಿಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಕಾಂಡೊಮ್‌ಗಳು ಬಿದ್ದಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಶಾಲಾ ಆವರಣದಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಸುತ್ತಮುತ್ತಲ ಪ್ರದೇಶ ಕತ್ತಲಾಗಿದ್ದು, ಇದನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ವಿದ್ಯುತ್ ದೀಪಗಳನ್ನು ಅಳವಡಿಸಿದರೂ ಅವುಗಳನ್ನು ಒಡೆದು ಹಾಕಲಾಗುತ್ತಿದ್ದು, ರಾಜಾರೋಷವಾಗಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರದೇಶದಲ್ಲಿ ಹೊಡೆದಾಟ–ಬಡಿದಾಟಗಳು ಸಾಮಾನ್ಯವಾಗಿದ್ದು, ಪೊಲೀಸರು ಎಚ್ಚರಿಕೆ ನೀಡಿದರೂ ಸಹ ಮತ್ತೆ ಅದೇ ಸ್ಥಳಕ್ಕೆ ಬಂದು ಹಾವಳಿ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ರಾತ್ರಿಯ ಹೊತ್ತಿನಲ್ಲಿ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕರವೇ ಆರೋಪಿಸಿದೆ. ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಯಪ್ರಕಾಶ್ ಶೆಟ್ಟಿ, ನಾಗರಾಜ್, ಗಣೇಶ್ ರಮೇಶ್, ಸವಿತಾ, ಆಶಾ ಸೇರಿದಂತೆ ಇತರರು ಉಪಸ್ಥಿತರಿದ್ದರು.



