ಉಡುಪಿ : ಸಮೃದ್ಧ ಬೈಂದೂರು ಪರಿಕಲ್ಪನೆಯ ‘300 ಟ್ರೀಸ್’ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಳ್ಕೋಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಬಸ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿಯಿಂದ ನಿರ್ಮಿಸಲಾದ ನೂತನ ಹೈಟೆಕ್ ಬಾಲಕಿಯರ ಶೌಚಾಲಯವನ್ನು ಉದ್ಘಾಟಿಸಿದರು. ಇದೇ ವೇಳೆ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿಯಿಂದ ಶಾಲೆಗೆ ನೀಡಲಾದ ನೂತನ ಶಾಲಾ ಬಸ್ ಅನ್ನು ಹಸ್ತಾಂತರಿಸಿದರು.

ಇದರೊಂದಿಗೆ ಜಿಲ್ಲಾ ಪಂಚಾಯತ್ ಅನುದಾನ 2025-26ರಡಿ ನಿರ್ಮಿಸಲಾದ ಬಾಲವನ ಹಾಗೂ ಶಾಲೆಯಲ್ಲಿ ಆರಂಭಗೊಂಡಿರುವ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಮಾಧ್ಯಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿಸರ ಜಾಗೃತಿ ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಸಹಕಾರ ಮತ್ತು ಒಗ್ಗಟ್ಟಿನಿಂದ ಗ್ರಾಮೀಣ ಶಾಲೆಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದ ಶಾಲೆಗಳು ಆಧುನಿಕ ಸೌಲಭ್ಯಗಳನ್ನು ಪಡೆಯುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಶಾಲೆಯ ಬಹುಕಾಲದ ಬೇಡಿಕೆಯಾಗಿದ್ದ ಬಾಲಕಿಯರ ಶೌಚಾಲಯ ನಿರ್ಮಾಣಕ್ಕೆ ನೆರವಾದ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆ ಹಾಗೂ ಅದರ ಉಪಾಧ್ಯಕ್ಷ ಪ್ರಶಾಂತ್ ಜೋಯಿಷಿ ಅವರನ್ನು ಶಾಸಕರು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಬಸ್ ಕೊಡುಗೆ ನೀಡಿದ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಸಹ ಸಂಸ್ಥಾಪಕ ಪ್ರವೀಣ್ ಕಾಸ್ಟಲಿನೊ ಹಾಗೂ ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ಜೋಬಿನ್ ಜೋಸೆಫ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಕೃಷ್ಣಮೂರ್ತಿ, ವಲಯ ಮೇಲ್ವಿಚಾರಕ ಮಹೇಶ್, ಎಸ್‌ಡಿಎಂಸಿ ಅಧ್ಯಕ್ಷೆ ಪ್ರೇಮಾ ಎಸ್. ನಾಯ್ಕ, ಸುವರ್ಣ ವಿದ್ಯಾನಿಧಿ ಅಧ್ಯಕ್ಷ ಸುರೇಂದ್ರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಕ್ಷತ್ರ ನಾಯ್ಕ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ದಾನಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಭಾಸ್ಕರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ಗಿರೀಶ್ ಜಿ.ಎಚ್. ವಂದಿಸಿದರು.



