Sunday, August 30, 2026

spot_img

ಸೆ.5ರಿಂದ ಜಿಲ್ಲೆಯಲ್ಲಿ ‘ಪ್ರಜಾಸೇವಾ ಆಂದೋಲನ’ ಸಭೆ

ಉಡುಪಿ : ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರತಿ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವಾ ಆಂದೋಲನ’ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಗಳನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ. ತಿಂಗಳ 1ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯಲಿವೆ. 2ನೇ ಮತ್ತು 4ನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದರ ಜತೆಗೆ, ತಮ್ಮ ಕೆಲಸಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಈ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಮುಂದಿಡಲು ಹಾಗೂ ಸ್ಥಳೀಯ ಮಟ್ಟದಲ್ಲೇ ಪರಿಹಾರ ಪಡೆದುಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ ಎಂದರು.

ಸಭೆ ನಡೆಯುವ ದಿನಾಂಕಕ್ಕೆ ಕನಿಷ್ಠ 15 ದಿನಗಳ ಮುಂಚಿತವಾಗಿ ಸಂಬಂಧಪಟ್ಟ ಕ್ಷೇತ್ರಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅಗತ್ಯವಾದ ಪೂರ್ವ ಮುದ್ರಿತ ಅರ್ಜಿ ನಮೂನೆಗಳನ್ನು ತಲುಪಿಸಬೇಕು. ಸಭಾ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಇಲಾಖಾವಾರು ಕೌಂಟರ್‌ಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಭೆಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಾಧ್ಯವಾದಷ್ಟು ತ್ವರಿತವಾಗಿ ಸ್ಪಂದಿಸಬೇಕು. ಪ್ರಜಾಸೇವಾ ಆಂದೋಲನ ಸಭೆ ನಡೆಯುವ ದಿನದಂದು ಸಂಬಂಧಪಟ್ಟ ಇಲಾಖೆಗಳು ಬೇರೆ ಯಾವುದೇ ಸಭೆಗಳನ್ನು ನಿಗದಿಪಡಿಸಬಾರದು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳು ತಮ್ಮ ಸೇವೆ, ಸೌಲಭ್ಯ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಬೇಕು. ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಇದ್ದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಪ್ರಜಾಸೇವಾ ಆಂದೋಲನ ಸಭೆಗಳ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ವರೂಪ ಟಿ.ಕೆ. ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles