ಉಡುಪಿ : ಹನ್ನೊಂದನೇ ಶತಮಾನದ ಆದ್ಯ ವಚನಕಾರ ಹಾಗೂ ನೇಕಾರ ಸಮುದಾಯದ ಆರಾಧ್ಯ ದೈವ ದೇವರ ದಾಸಿಮಯ್ಯ ಅವರು ಸರಳ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಶ್ರಮವಹಿಸಿದ್ದರು ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ) ಉಡುಪಿ ಇವರ ಸಹಯೋಗದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಚನ ಚಳವಳಿಗಿಂತ ಮೊದಲು ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದು, ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಶೋಭಾ ಹರಿಪ್ರಸಾದ್ ಮಾತನಾಡಿ, ಭಾರತೀಯ ಸಾಹಿತ್ಯವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಮಧ್ಯಕಾಲೀನ ಸಾಹಿತ್ಯದಲ್ಲಿ ವಚನ ಸಾಹಿತ್ಯವು ಮಹತ್ತರ ಪಾತ್ರ ವಹಿಸಿದೆ ಎಂದರು. ದೇವರ ದಾಸಿಮಯ್ಯರು ರಚಿಸಿದ ಅನೇಕ ವಚನಗಳಲ್ಲಿ 176 ಮಾತ್ರ ಲಭ್ಯವಿದ್ದು, ಉಳಿದವು ಲಭ್ಯವಾಗಿಲ್ಲ ಎಂದು ಹೇಳಿದರು.ಯಾದಗಿರಿ ಜಿಲ್ಲೆಯ ಮುದನೂರಿನಲ್ಲಿ ಜನಿಸಿದ ದಾಸಿಮಯ್ಯರು ಆಧ್ಯಾತ್ಮಿಕ ಜ್ಞಾನಕ್ಕಾಗಿ ಶ್ರೀಶೈಲಕ್ಕೆ ತೆರಳಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದಾಸಿಮಯ್ಯರು ತ್ರಿಪದಿ ರೂಪದಲ್ಲಿ ವಚನಗಳನ್ನು ರಚಿಸಿ ಸಮಸಮಾಜ ನಿರ್ಮಾಣದ ಸಂದೇಶ ನೀಡಿದ್ದಾರೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ರವಿ ಶೆಟ್ಟಿಗಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಗಿರೀಶ್ ಶೆಟ್ಟಿಗಾರ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯರಾಮ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು. ಡಾ. ವೆಂಕಟರಾಯ್ ಶೆಟ್ಟಿಗಾರ್ ವಂದಿಸಿದರು.



