ಉಡುಪಿ : ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಜೊತೆಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಅಧಿಕಾರಿಗಳಿಗೆ ತಿಳಿಸಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 4 ರಂದು ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು ಅಂದು ಬೆಳಗ್ಗೆ 9.30 ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ, ಅವರ ಕಾಳಜಿ ಹಾಗೂ ಆರೈಕೆ ಕುರಿತು ವಿಶೇಷ ಉಪನ್ಯಾಸ, ಸರಕಾರದಿಂದ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಹಾಗೂ ಸೈಬರ್ ಕ್ರೈಂ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ ಅವರು, ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 16 ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದರು.

ಹಿರಿಯ ನಾಗರಿಕರಿಗೆ ಯಾವುದೇ ಕುಂದುಕೊರತೆ ಉಂಟಾಗದಂತೆ ಕುಡಿಯುವ ನೀರು, ಊಟೋಪಚಾರ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳ ಪಟ್ಟಿ ಮಾಡಿ ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಶಿಷ್ಟಾಚಾರದಂತೆ ಅಹ್ವಾನ ಪತ್ರಿಯನ್ನು ಮುದ್ರಿಸಿ ಜನಪ್ರತಿನಿಧಿ ಹಾಗೂ ಗಣ್ಯರಿಗೆ ನೀಡಿ ಆಹ್ವಾನಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


