ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದ್ದು, ಸುಮಾರು 2.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪ್ರಯಾಣಿಕರ ಸೌಲಭ್ಯಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಸಂಪೂರ್ಣ ಹೊಸ ಕಾಯಕಲ್ಪ ನೀಡಲಾಗಿದ್ದು, ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ಉಡುಪಿ ರೈಲು ನಿಲ್ದಾಣ ಆವರಣದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ನಿರ್ಮಿಸಲಾದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಜಿಲ್ಲಾಡಳಿತದ ಸಹಕಾರದೊಂದಿಗೆ ಈ ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಯಾಣಿಕರಿಗೆ ಆಧುನಿಕ ಹಾಗೂ ಸುಗಮ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



