ಉಡುಪಿ: ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೊಯ್ಲ ಗ್ರಾಮದ ಗಂಡಿ ಬಾಗಿಲು ನಿವಾಸಿ ಆರಿಫ್ ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದ ವಾರಂಟ್ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ವಾರಂಟ್ ಸಿಬಂದಿಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಅವರು ಬೆಳಗ್ಗೆ ಕೊಯ್ಲ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಮಾರ್ಚ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.



