ಉಡುಪಿ : ಭಾರತದ ಮಹಿಳಾ ಕ್ರಿಕೆಟ್ ತಂಡವು ವಿಶ್ವಕಪ್ ಸ್ಪರ್ಧೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಜಹಾಂಗೀರ್ ಭಟ್ ಉಡುಪಿ ಸ್ವೀಟ್ಸ್ ಹೌಸ್, ಕಲ್ಸಂಕ ಅವರ ಸಂಯುಕ್ತ ಆಶ್ರಯದಲ್ಲಿ ನಗರ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಅಶ್ವತ್ಥ ಕಟ್ಟೆ ವಠಾರದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಉಡುಪಿ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೂರ್ಣಿಮಾ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಿದಾಗ ಅವರು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಲ್ಲರು ಎಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಒಳಕಾಡು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ವಿಜಯೋತ್ಸವವನ್ನು ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸ್ಥಳದಲ್ಲಿಯೇ ತಯಾರಿಸಲಾದ ಜಿಲೇಬಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಎಂ. ಶ್ರೀನಾಗೇಶ್ ಹೆಗ್ಡೆ, ಕೆ. ಬಾಲಗಂಗಾಧರ ರಾವ್, ಸಮಾಜಸೇವಕಿ ಮತ್ತು ಸುದ್ದಿ ವಾಹಿನಿಯ ನಿರೂಪಕಿ ಅನಿತಾ, ಸುದ್ದಿ ವಾಚಕಿ ನಿಖಿತಾ, ಕಾಲೇಜು ವಿದ್ಯಾರ್ಥಿನಿಯರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.



