ಉಡುಪಿ : ನಾಡು–ನುಡಿಯಾದ ಕನ್ನಡ ಭಾಷೆಯನ್ನು ಸರ್ಕಾರಿ ಕಚೇರಿಗಳ ಜೊತೆಗೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಸರ್ಕಾರೇತರ ಸಂಸ್ಥೆಗಳು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದರು.

ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಕನ್ನಡ ತಂತ್ರಾಂಶದ ಬಳಕೆಯನ್ನು ಕಡ್ಡಾಯಗೊಳಿಸಬೇಕು. ಉದ್ಯೋಗಕ್ಕಾಗಿ ಜಿಲ್ಲೆಗೆ ಬಂದಿರುವ ಅನ್ಯಭಾಷಿಕರಿಗೂ ಕನ್ನಡ ಕಲಿಯುವಂತೆ ಉತ್ತೇಜನ ನೀಡಬೇಕು. ಸರ್ಕಾರಿ ಕಚೇರಿಗಳು, ವಾಣಿಜ್ಯ ಸಂಸ್ಥೆಗಳು, ಅಂಗಡಿ, ಹೋಟೆಲ್, ಶಾಲಾ–ಕಾಲೇಜು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಆಸ್ಪತ್ರೆಗಳಲ್ಲಿ ರೋಗಿಗಳ ಹೆಸರುಗಳನ್ನು ಕನ್ನಡದಲ್ಲಿ ದಾಖಲಿಸಬೇಕು. ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಕಲಿಸುವ ತರಗತಿಗಳನ್ನು ಆಯೋಜಿಸಿ, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವ ಭಾಷಾ ಕೌಶಲ್ಯ ತರಬೇತಿ ನೀಡಬೇಕು ಎಂದರು. ಶಾಲೆಗಳಲ್ಲಿ ಕನ್ನಡ ಕಲಿಕೆಗೆ ತೊಂದರೆ ಉಂಟುಮಾಡುವ ಯಾವುದೇ ಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಯಾಕೂಬ್ ಖಾದರ್ ಗುಲ್ವಾಡಿ ಮಾತನಾಡಿ, ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳ ಉಳಿವು–ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



