ಉಡುಪಿ : ಮರಳು ಸಾಗಾಟ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಹಂಗಳೂರು ರಾಷ್ಟ್ರೀಯ ಹೆದ್ದಾರಿ–66ರ ಡಿವೈಡರ್ ಬಳಿ ನಡೆದಿದೆ. ಮೃತರು ಮೂಲತಃ ಆಲೂರು ನಿವಾಸಿಯಾಗಿದ್ದು, ಪ್ರಸ್ತುತ ಕೋಟೇಶ್ವರದ ಅಂಕದಕಟ್ಟೆ ಬಳಿ ವಾಸವಾಗಿದ್ದ ಕೃಷ್ಣಮೂರ್ತಿ ಅಡಿಗ (57) ಎಂದು ಗುರುತಿಸಲಾಗಿದೆ.

ಅಡುಗೆ ಕೆಲಸ ಮಾಡಿಕೊಂಡಿದ್ದ ಅಡಿಗ ಅವರು ವಾರದ ಹಿಂದೆ ಖರೀದಿಸಿದ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಹೊರಟಿದ್ದ ಅವರು ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ತಿರುವು ಪಡೆದಾಗ ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಕೃಷ್ಣಮೂರ್ತಿಯವರ ತಲೆಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಟಿಪ್ಪರ್ ಚಾಲಕ ಶಶಾಂಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ನಗರ ಠಾಣೆ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಹಾಗೂ ಸಂಚಾರ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



