ಉಡುಪಿ : ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಪ್ರತಿಯೊಬ್ಬ ನಾಗರಿಕರೂ ಜಾಗೃತಿಯಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಾತ್ರ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ ಹೇಳಿದರು.

ಅವರು ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಲಾದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ತಂತ್ರಜ್ಞಾನ ಮುಂದುವರಿದಿದ್ದರೂ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಗೆ ಕೊರತೆ ಇದೆ. ಅತಿವೇಗ, ಅಜಾಗರೂಕ ಚಾಲನೆ ಮತ್ತು ನಿಯಮ ಉಲ್ಲಂಘನೆಯಿಂದ ಅಪಘಾತಗಳು ಸಂಭವಿಸಿ ಜೀವಹಾನಿ ಉಂಟಾಗುತ್ತಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ತಾಳ್ಮೆ ಅತ್ಯವಶ್ಯಕವಾಗಿದ್ದು, ಮುಂಚಿತವಾಗಿ ಹೊರಟು ಸಮಾಧಾನದಿಂದ ಚಾಲನೆ ಮಾಡಿದರೆ ಸುರಕ್ಷಿತವಾಗಿ ಗಮ್ಯ ತಲುಪಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್. ಎಂ.ಐ.ಟಿ ಉಪನ್ಯಾಸಕ ಬಾಲಕೃಷ್ಣ ಮುದ್ದೋಡಿ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ತಾಧಿಕಾರಿ ಮಂಜುನಾಥ್ ಬಿ ಉಪಸ್ಥಿತರಿದ್ದರು. ಕಚೇರಿ ಅಧೀಕ್ಷಕ ರಾಮಚಂದ್ರಪ್ಪ ಹೆಚ್.ಸಿ ಸ್ವಾಗತಿಸಿದರು. ಮೋಟಾರು ವಾಹನ ನಿರೀಕ್ಷಕ ಶ್ರೇಯಸ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಪ್ರಥಮ ದರ್ಜೆ ಸಹಾಯಕ ಗಣೇಶ್ ರಾವ್ ವಂದಿಸಿದರು.



