Saturday, February 7, 2026

spot_img

ಮಕ್ಕಳ ಸುರಕ್ಷತೆಗೆ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ: ಡಾ. ತಿಪ್ಪೇಸ್ವಾಮಿ ಕೆ. ಟಿ

ಉಡುಪಿ : ಸರ್ಕಾರ ಮಕ್ಕಳ ರಕ್ಷಣೆಗೆ ಜಾರಿಗೆ ತಂದಿರುವ ನೀತಿ–ನಿಯಮಾವಳಿಗಳು ತಳಮಟ್ಟದಲ್ಲಿ ಶೇಕಡಾ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಶಾಲೆಗೆ ಬಂದ ಕ್ಷಣದಿಂದ ಮನೆಗೆ ಮರಳುವವರೆಗೆ ಶಿಕ್ಷಕರು ಅವರ ಕಾನೂನಾತ್ಮಕ ಪೋಷಕರಾಗಿರುತ್ತಾರೆ. ಆದ್ದರಿಂದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಸುರಕ್ಷತೆ ತುರ್ತು ಮತ್ತು ಅತಿ ಮಹತ್ವದ ವಿಷಯವಾಗಿದ್ದು, ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಂತಹ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅವರು ತಿಳಿಸಿದರು.

ಮಕ್ಕಳ ರಕ್ಷಣಾಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆಯ ಕುರಿತು ಸಮಗ್ರ ಅರಿವು ಇರಬೇಕು. ಪ್ರಾಯೋಗಿಕವಾಗಿ ಕೆಲ ಜಿಲ್ಲೆಗಳಲ್ಲಿ ಆರಂಭಗೊಂಡಿರುವ ಈ ತರಬೇತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾ ಕಾನೂನುಗಳ ಅನುಷ್ಠಾನ ಉತ್ತಮವಾಗಿದ್ದು, ಮುಂದಿನ ವರ್ಷದಿಂದ ಶಾಲಾ–ಕಾಲೇಜುಗಳಲ್ಲಿ ನಿಯಮಿತವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯ ಸರ್ಕಾರವು ಮಕ್ಕಳ ರಕ್ಷಣಾ ನೀತಿ–2016ಕ್ಕೆ ತಿದ್ದುಪಡಿ ತಂದು 2023ರಲ್ಲಿ ಪರಿಷ್ಕರಿಸಿ ರಾಜ್ಯದಾದ್ಯಂತ ಜಾರಿಗೆ ತಂದಿದೆ. ಈ ನೀತಿಯಲ್ಲಿ ಕಡ್ಡಾಯ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ, ಅಪರಾಧ ತಡೆಗಟ್ಟುವಿಕೆ ಹಾಗೂ ಬಾಲನ್ಯಾಯ ಕಾಯ್ದೆ–2015ರ ಅಂಶಗಳನ್ನು ಒಳಗೊಂಡಿದೆ. ಈ ನೀತಿಯನ್ವಯ ರಾಜ್ಯದ 31 ಜಿಲ್ಲೆಗಳ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದೊಂದು ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಮಕ್ಕಳ ರಕ್ಷಣಾಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಸರ್ಕಾರ ರೂಪಿಸುವ ನೀತಿಗಳು ಕೇವಲ ಕಾಗದಕ್ಕೆ ಸೀಮಿತವಾಗದೆ ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂಬ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಸ್ಥಳೀಯವಾಗಿ ಅನುಷ್ಠಾನಗೊಳಿಸಿ ಮಕ್ಕಳ ಸುರಕ್ಷತೆಯನ್ನು ಕಾಪಾಡಬೇಕು ಎಂದು ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲ ವೈ.ಟಿ. ರಾಘವೇಂದ್ರ ಅವರು ಬಾಲನ್ಯಾಯ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles